ಪಿರಿಯಾಪಟ್ಟಣ: ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಮಹದೇವ ಅವರ ಮನೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಭೇಟಿ ನೀಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಪರ ಬೆಂಬಲ ಕೋರಿದರು.
ಎರಡು ಪಕ್ಷಗಳು ನಮ್ಮಲ್ಲಿ ಇರುವ ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಿ ದುಡಿದಾಗ ಮಾತ್ರ ಮೈತ್ರಿ ಅಭ್ಯರ್ಥಿ ಗೆಲುವು ಸಾಧ್ಯವಾಗಲಿದೆ. ಬಿಜೆಪಿಯನ್ನು ಹೊರಗಿಡುವ ದೃಷ್ಟಿಯಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಾಗಿದೆ.
ಈ ಹಿಂದೆ ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ 37 ಸಾವಿರ ಮತ ಪಡೆದುಕೊಂಡಿದ್ದು, ಈ ಬಾರಿ ಇದಕ್ಕೆ ಅವಕಾಶ ನೀಡದೇ ಸಿ.ಎಚ್.ವಿಜಯಶಂಕರ್ ಅವರನ್ನು ಭಾರೀ ಮತಗಳ ಅಂತರದಿಂದ ಗೆಲ್ಲಿಸಬೇಕಾಗಿದೆ. ಇದಕ್ಕೆ ನಿಮ್ಮ ಸಹಕಾರ ಬೇಕಿದೆ ಎಂದು ವಿಜಯಶಂಕರ್ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಶಾಸಕ ಕೆ.ಮಹದೇವ್, ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಗೆಲುವಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಮೈತ್ರಿ ಪಕ್ಷ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಇಬ್ಬರ ಮೇಲೂ ಇದೆ. ಪರಸ್ಪರ ನಂಬಿಕೆಯ ಆಧಾರದ ಮೇಲೆ ಕೆಲಸ ನಿರ್ವಹಿಸಬೇಕಿದೆ. ಕಾಂಗ್ರೆಸ್ ನಿಗದಿಪಡಿಸಿರುವ ಕಾರ್ಯಕ್ರಮಗಳಿಗೆ ಹಾಜರಾಗುವುದಾಗಿ ತಿಳಿಸಿದರು.
ಏ.4ರಂದು ಕಂಪಲಾಪುರದಲ್ಲಿ ಜೆಡಿಎಸ್ ಶಾಸಕ ಕೆ.ಮಹದೇವ್ ಮತ್ತು ಕೆ.ವೆಂಕಟೇಶ್ ಜಂಟಿ ಪತ್ರಿಕಾಗೋಷ್ಠಿ ಹಾಗೂ ಪ್ರಚಾರ ಕೈಗೊಳ್ಳಲಿದ್ದಾರೆ. ಏ.10ರಂದು 16 ಪಂಚಾಯ್ತಿಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್‌ಜಾನ್ ಬಾಬು, ನಗರಪಾಲಿಕೆ ಸದಸ್ಯ ಪಿ.ಪ್ರಶಾಂತ್‌ಗೌಡ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯಣ್ಣ, ವಕೀಲರ ಸಂಘದ ಅಧ್ಯಕ್ಷ ಮಹೇಶ್, ರಾಜೇಗೌಡ, ಸುದೀಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.