ಮಹಾರಾಷ್ಟ್ರ: ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ(Maharashtra Election Resluts)ಚುನಾವಣೆಯ ಮತಎಣಿಕೆ ಶನಿವಾರ (ನ.23) ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಈವರೆಗಿನ ಲೆಕ್ಕಾಚಾರದ ಪ್ರಕಾರ ಎನ್ ಡಿಎ ಮೈತ್ರಿಯ ಮಹಾಯುತಿ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ದಾಟಿದೆ.
288 ಸದಸ್ಯದ ಬಲದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ 218 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾವಿಕಾಸ್ ಅಘಾಡಿ ಕೇವಲ 56 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ.
ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಏರಲು 145 ಸ್ಥಾನಗಳ ಮ್ಯಾಜಿಕ್ ನಂಬರ್ ಅಗತ್ಯವಿದ್ದು, ಈಗಾಗಲೇ ಮಹಾಯುತಿ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ, ಮತ್ತು ಏಕನಾಥ್ ಶಿಂಧೆಯ ಶಿವಸೇನಾ , ಅಜಿತ್ ಪವಾರ್ ಬಣದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 221 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಕಾಂಗ್ರೆಸ್, ಉದ್ಧವ್ ಠಾಕ್ರೆ ಬಣದ ಶಿವಸೇನೆ ಹಾಗೂ ಶರತ್ ಪವಾರ್ ನೇತೃತ್ವದ ಎನ್ ಸಿಪಿ ಕೇವಲ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಮಹಾರಾಷ್ಟ್ರದ 149 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮಹಾಯುತಿ 122 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದು, ಶಿಂಧೆ ಬಣದ ಶಿವಸೇನೆ 81 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು 57 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 59 ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿದ್ದ ಅಜಿತ್ ಪವಾರ್ ಬಣದ ಎನ್ ಸಿಪಿ 36 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮಹಾವಿಕಾಸ್ ಅಘಾಡಿ ಮೈತ್ರಿಯಲ್ಲಿ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 21 ಸ್ಥಾನಗಳಲ್ಲಿ 86 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಶರತ್ ಪವಾರ್ ನೇತೃತ್ವದ ಎನ್ ಸಿಪಿ 20 ಸ್ಥಾನಗಳಲ್ಲಿ ಹಾಗೂ ಉದ್ಧವ್ ಠಾಕ್ರೆ ಬಣದ ಶಿವಸೇನಾ 95 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಕೇವಲ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.