ಮುಂಬೈ: ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಸಿ ವೋಟರ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿಯೊಂದಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ:
ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಪ್ರಕಾರ, ಈ ಬಾರಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 288 ಸ್ಥಾನಗಳಲ್ಲಿ 194 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪೂರ್ಣ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಕಾಂಗ್ರೆಸ್ ಬೆಂಬಲಿತ ಮೈತ್ರಿ ಪಕ್ಷ 86 ಸ್ಥಾನಗಳನ್ನು ಹಾಗೂ ಇತರ ಪಕ್ಷಗಳು ಎಂಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.
ಕಾಂಗ್ರೆಸ್ ಮೈತ್ರಿಕೂಟದ ಒಟ್ಟು ಸ್ಥಾನಗಳ ಗೆಲುವಿನಲ್ಲಿ ಹೆಚ್ಚಾಗಲಿದೆ. ಪ್ರಸಕ್ತ 72 ಇದ್ದು, ಈ ಬಾರಿ 86 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಸಮೀಕ್ಷೆ ವಿವರಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದು, ಶೇ.47ರಷ್ಟು ವೋಟಿಂಗ್ ಹಂಚಿಕೆಯಾಗಲಿದ್ದು, ಕಾಂಗ್ರೆಸ್ ಮೈತ್ರಿಕೂಟ ಶೇ.39ರಷ್ಟು ಮತ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಹರ್ಯಾಣದಲ್ಲೂ ಮತ್ತೆ ಅರಳಲಿದೆ ಕಮಲ:
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ಬಿಜೆಪಿ ಹರ್ಯಾಣದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಸಿ ವೋಟರ್ ಸಮೀಕ್ಷೆ ಭವಿಷ್ಯ ನುಡಿದಿದೆ. 90 ಸ್ಥಾನಗಳನ್ನು ಹೊಂದಿರುವ ಹರ್ಯಾಣದಲ್ಲಿ ಈ ಬಾರಿ 83 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು, ಕೇವಲ 3 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ ಉಳಿದ 4 ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ತಿಳಿಸಿದೆ.