ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು? ಚುನಾವಣೆ ಮತ ಎಣಿಕೆ ಮುಗಿದು ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮಹಾಯುತಿ ಕೂಟದ ಮಿತ್ರರಾದ ಬಿಜೆಪಿ, ಶಿವಸೇನೆ ಮತ್ತು ಎನ್ ಸಿಪಿ ನಡುವೆ ಮಾತುಕತೆಗಳು ನಡೆಯುತ್ತಿದ್ದು, ಇನ್ನೂ ಸಿಎಂ ಯಾರೆನ್ನುವುದು ನಿಗೂಢವಾಗಿದೆ.
ಮಹಾರಾಷ್ಟ್ರದ ಮುಂದಿನ ಸರ್ಕಾರದ ನಾಯಕತ್ವದ ಬಗ್ಗೆ ಊಹಾಪೋಹಗಳ ನಡುವೆ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಭಾರತೀಯ ಜನತಾ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಚರ್ಚೆಗಳು ವಿಳಂಬವಾಗುತ್ತಿರುವ ಸಂದರ್ಭದಲ್ಲಿ ಶನಿವಾರ ಪವಾರ್ ಅವರ ಹೇಳಿಕೆಯು ಮಹತ್ವ ಪಡೆದಿದೆ.
ಉಪಮುಖ್ಯಮಂತ್ರಿ ಸ್ಥಾನವನ್ನು ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಹಂಚಿಕೊಳ್ಳಲಿವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಬಿಜೆಪಿ, ಶಿವಸೇನೆ (ಶಿಂಧೆ ಬಣ), ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಒಳಗೊಂಡಿರುವ ಮಹಾಯುತಿ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪವಾರ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರಚನೆಗೆ ಒಂದು ತಿಂಗಳು ತೆಗೆದುಕೊಂಡ 1999 ರ ಉದಾಹರಣೆಯನ್ನು ಉಲ್ಲೇಖಿಸಿ, ಸರ್ಕಾರ ರಚನೆಯಲ್ಲಿ ಇಂತಹ ವಿಳಂಬಗಳು ಹಿಂದೆಂದೂ ಇರಲಿಲ್ಲ ಎಂದರು.
ಮಹತ್ವದ ಬೆಳವಣಿಗೆಯಲ್ಲಿ ಶನಿವಾರ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಅವರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಡಿಸೆಂಬರ್ 5ರ ಸಂಜೆ 5 ಗಂಟೆಗೆ ಆಜಾದ್ ಮೈದಾನದಲ್ಲಿ ನಡೆಯಲಿದೆ ಎಂದರು.