Advertisement

ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಿ

05:32 PM Jul 30, 2022 | Team Udayavani |

ಗದಗ: ಜಿಲ್ಲೆಯ ವಿವಿಧ ಇಲಾಖೆಗಳಿಗೆ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ನಿಗದಿಪಡಿಸಲಾದ ಗುರಿಯ ಆರ್ಥಿಕ ಹಾಗೂ ಭೌತಿಕ ಸಾಧನೆಗಾಗಿ ಅಧಿಕಾರಿಗಳು ಮುಂದಾಗಬೇಕೆಂದು ಪ್ರಭಾರಿ ಜಿಲ್ಲಾದಿಕಾರಿ ಡಾ|ಸುಶೀಲಾ ಬಿ. ಹೇಳಿದರು.

Advertisement

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖಾ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ನಿಗದಿಪಡಿಸಿದ ಕಾಮಗಾರಿ ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ. ನಿಗದಿತ ಅವಧಿಯೊಳಗೆ ಯೋಜನೆಯ ಗುರಿ ಸಾಧನೆ ಮಾಡುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಯೋಜನೆಯಡಿ ನೀಡಲಾದ ಅನುದಾನ ಪ್ರಸಕ್ತ ವರ್ಷದಲ್ಲಿಯೇ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ಹಿಂದಿರುಗಿ ಹೋಗದಂತೆ ಮುಂಜಾಗ್ರತೆ ವಹಿಸಬೇಕು. ಎಸ್‌ಸಿಪಿ, ಟಿಎಸ್‌ಪಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ, ಪಂಗಡದ ಕಾಲನಿಗಳಲ್ಲಿಯೇ ಕೈಗೊಳ್ಳುವ ಮೂಲಕ ಸರ್ಕಾರದ ಉದ್ದೇಶ ಪೂರೈಕೆಗೆ ಅಧಿಕಾರಿಗಳು ಶ್ರಮಿಸಬೇಕೆಂದರು.

ಸಕಾಲ: ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸ್ವೀಕರಿಸಲಾದ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಕಾಲ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವಂತಾಗಬೇಕು. ವಿನಾಕಾರಣ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು. ಸ್ವೀಕರಿಸಿದ ಅರ್ಜಿಗಳನ್ನು ವಿಳಂಬ ಮಾಡದೇ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಕಾಲ ಯೋಜನೆ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಿ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕೆಂದು ಡಾ| ಸುಶೀಲಾ ತಿಳಿಸಿದರು.

Advertisement

ವಾ.ಕ.ರ.ಸಾ.ಸಂಸ್ಥೆ, ಆರ್‌.ಡಿ.ಪಿ.ಆರ್‌. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗೃಹ ನಿರ್ಮಾಣ ಮಂಡಳಿ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಕಾಲ ಅರ್ಜಿಗಳಿಗೆ ಸೂಕ್ತ ಕಾಲಮಿತಿಯಲ್ಲಿಯೇ ವಿಲೇವಾರಿ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಿತ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

2022ರ ಜುಲೈನಲ್ಲಿ ಸಕಾಲ ಯೋಜನೆಯಡಿ 61768 ಅರ್ಜಿಗಳು ಸ್ವೀಕೃತವಾಗಿವೆ ಎಂದು ಸಕಾಲ ಕಾರ್ಯಕ್ರಮದ ನೋಡಲ್‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಯೋಜನೆಯ ಪ್ರಗತಿ ಪರಿಶೀಲನೆಯನ್ನು ಕೈಗೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಬಸವಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಡಿಡಿಎಲ್‌ಆರ್‌ ರವಿಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಹಬೂಬ್‌ ತುಂಬರಗಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿಠಲಕುಮಾರ್‌ ಜಾಬಗೌಡ್ರ, ಡಿಯುಡಿಸಿ ಯೋಜನಾ ನಿರ್ದೇಶಕ ಮಾರುತಿ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next