ಮಂಗಳೂರು: ಇಲ್ಲಿನ ಸುರತ್ಕಲ್ ನಲ್ಲಿ ಜುಲೈ 28ರಂದು ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಪಣಂಬೂರು ಎಸಿಪಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಪಣಂಬೂರು ಎಸಿಪಿ ಕಚೇರಿಯಲ್ಲಿ ಕಮಿಷನರ್ ಶಶಿಕುಮಾರ್ ಉಪಸ್ಥಿತಿಯಲ್ಲಿ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ:ಮಳೆಯ ಆರ್ಭಟ : ಕುಂದಾಪುರ, ಬೈಂದೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ
ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಲಾದ ಕಾರಿನ ಮಾಲಕ ಅಜಿತ್ ಕ್ರಾಸ್ತಾನನ್ನು ಶನಿವಾರ ಬಂಧಿಸಲಾಗಿತ್ತು. ಐದು ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಪೊಲೀಸರು, ಅಜಿತ್ ನಿಂದ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 51ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೊಳ ಪಡಿಸಲಾಗಿದೆ. ಸೋಮವಾರ ನಗರಕ್ಕೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ನಡೆಸಿರುವ ಡಿಜಿಪಿ ಪ್ರವೀಣ್ ಸೂದ್ ಅವರು, ತನಿಖೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.