ವಿಜಯಪುರ: ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿನ ಮಳಿಗೆಗಳ ಬಾಡಿಗೆಗೆ ನೀಡಲು ಶೀಘ್ರವೇ ಸಭೆಯಲ್ಲಿ ನಿರ್ಣಯ ಅಂಗೀಕರಿಸಬೇಕು. ಇದರಿಂದ ಬೇಗನೇ ವ್ಯಾಪಾರಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿ ಸಿಬ್ಬಂದಿಗಳಿಗೆ ವಸತಿ ಸಮುತ್ಛಯ ಹಾಗೂ ಚಿಕ್ಕ ವಾಣಿಜ್ಯ ಮಳಿಗೆಗಳ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಭವನದಲ್ಲಿ ಕೃಷಿ ಮಾರುಕಟ್ಟೆ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ತೊರವಿ ಸಮೀಪದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯ ಸ್ಥಳವನ್ನು ದೊರಕಿಸಿಕೊಡಲು ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವ ಭರವಸೆ ನೀಡಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ವಾರಕ್ಕೊಮ್ಮೆ ಸ್ವತ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಇಲ್ಲಿನ ಪ್ರದೇಶವನ್ನು ಸ್ವತ್ಛವಾಗಿರಿಸಿ ಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಕನಿಷ್ಟ ವಾರಕ್ಕೆ ಒಂದು ಬಾರಿಯಾದರೂ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿ ಸ್ವತ್ಛತಾ ಕಾರ್ಯ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿಯೂ ಒಂದು ನಗರ ಆರೋಗ್ಯ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು ಅದಕ್ಕಾಗಿ ಅಗತ್ಯ ಅನುದಾನವನ್ನು ಒದಗಿಸುವ ಎಂದು ತಿಳಿಸಿದರು.
ಸಭೆಯಲ್ಲಿ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ವಿಶ್ವನಾಥ ಪಾಟೀಲ, ಅಧಿಕಾರಿಗಳಾದ ಸುಮಶ್ರೀ ಕದ್ರಿ, ಲಕ್ಷ್ಮಣ ಜಾಧವ, ವಿಕ್ರಂ ಗಾಯಕವಾಡ, ಚಂದ್ರು ಚೌದ್ರಿ, ಅಶೋಕ ಬೆಲ್ಲದ ಸೇರಿದತೆ ಇತರರು ಇದ್ದರು.