Advertisement

ಆಸ್ಪತ್ರೆ ಜನಸ್ನೇಹಿಯಾಗಿಸಿ: ಪಾಂಡೆ

03:20 PM Jul 27, 2017 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ರಕ್ಷಣೆಯತ್ತ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ಅವರಿಗೆ ವಿಶೇಷ ಪೌಷ್ಟಿಕ ಆಹಾರ ಮತ್ತು ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಂಕಜ ಕುಮಾರ ಪಾಂಡೆ ಸೂಚಿಸಿದರು.

Advertisement

ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಮತ್ತು ಯಾವುದೇ ರೀತಿಯ ಔಷಧಿಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಎಲ್ಲ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳ ನಿರ್ವಹಣೆ ಸರಿಯಾಗಿ ಮಾಡಿ ಜನಸ್ನೇಹಿ ಆಗುವಂತೆ ನೋಡಿಕೊಳ್ಳಬೇಕು. ಶಿಶು ಮತ್ತು ಬಾಣಂತಿಯರ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖ ಆಗುವತ್ತ ಜಿಲ್ಲಾ ಆರೋಗ್ಯಾಧಿಕಾರಿಗಳು ಗಮನ ಹರಿಸಬೇಕು ಎಂದರು. ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ನಿರ್ಮಾಣಕ್ಕಾಗಿ ಸಂಸದರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಒದಗಿಸಬೇಕು.
ಅಂಗನವಾಡಿ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರ ಕಟ್ಟಡಗಳಿಲ್ಲದ ಕಡೆ ಲಭ್ಯವಿರುವ ಸಮುದಾಯ ಭವನಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ನಡೆಸುವ ಬಗ್ಗೆ ಚಿಂತನೆ ಮಾಡಬೇಕು ಎಂದು ಹೇಳಿದರು.

ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿಧಾಯಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಆಗುವಂತೆ ನೋಡಿಕೊಳ್ಳಬೇಕು ಎಂದರು. ಸ್ವಚ್ಛ ಭಾರತ ಅಭಿಯಾನ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ, ಬಹುಗ್ರಾಮ ಕುಡಿಯುವ ನೀರು, ಗಂಗಾ ಕಲ್ಯಾಣ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲಿಸಿ ಡಾ| ಅಂಬೇಡ್ಕರ್‌ ಅಭಿವೃದ್ಧಿ ನಿಗಮದ 2015-16 ಸಾಲಿನ ವಿದ್ಯುದ್ದೀಕರಣಕ್ಕಾಗಿ ಬಾಕಿ ಉಳಿದ ಗಂಗಾ ಕಲ್ಯಾಣ ಯೋಜನೆಗಳಿಗೆ ಕೂಡಲೇ ವಿದ್ಯುತ್‌ ಸೌಲಭ್ಯ ಕಲ್ಪಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಆರೋಗ್ಯ, ಶಿಕ್ಷಣ ಕ್ಷೇತ್ರ ಬಲವರ್ಧಿಸಲು ಎಲ್ಲ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಪಾಲಿಕೆ ಆಯುಕ್ತ ಪಿ.ಸುನೀಲಕುಮಾರ, ಐಎಎಸ್‌ ಪ್ರೊಬೇಷನರಿ ಅಧಿಕಾರಿ ಆಕೃತಿ ಸಾಗರ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next