Advertisement

ಅಲ್ಪಸಂಖ್ಯಾತರಿಗೆ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ

10:48 AM Aug 10, 2019 | Suhan S |

ಕೊಪ್ಪಳ: ವಿವಿಧ ಇಲಾಖೆಗಳ ಮೂಲಕ ಅಲ್ಪಸಂಖ್ಯಾತರಿಗೆ ನೀಡುವ ಹಲವು ಯೋಜನೆಯ ಸೌಲಭ್ಯಗಳ ಬಗ್ಗೆ ಸಮುದಾಯದವರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸುನೀಲ್ ಕುಮಾರ್‌ ವಿವಿಧ ಇಲಾಖೆಗಳ ಅಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಸಕ್ತ ಸಾಲಿನ ಮೊದಲನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೌಲಭ್ಯ ಒದಗಿಸಲು ಅನುದಾನವನ್ನು ಮೀಸಲಿಡಲಾಗಿದೆ. ಈ ಬಗ್ಗೆ ಸಮುದಾಯಕ್ಕೆ ಸರಿಯಾದ ಮಾಹಿತಿಯಿಲ್ಲ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯಡಿ ನೀಡುವ ಸೌಲಭ್ಯಗಳ ಕುರಿತು ಅಲ್ಪಸಂಖ್ಯಾತರಿಗೆ ಮಾಹಿತಿ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನ ಜಿಲ್ಲಾ ಸ್ಥಾಯಿ ಸಮಿತಿಯ ನಾಮನಿರ್ದೇಶಿತ ಸದಸ್ಯರು ಸಮುದಾಯಕ್ಕೆ ಮಾಹಿತಿ ನೀಡಿ ಯೋಜನೆಗಳ ಸದುಪಯೋಗಕ್ಕೆ ಶ್ರಮಿಸಬೇಕು ಎಂದರು.

ಭೂ ಒಡೆತನದಲ್ಲಿ ಭೂರಹಿತ ಬಡ ಕುಟುಂಬಗಳಿಗೆ ಎರಡು ಎಕರೆ ಕೃಷಿ ಭೂಮಿಯನ್ನು ಪ್ರಥಮ ಬಾರಿಗೆ ಕೊಪ್ಪಳ ಜಿಲ್ಲೆಯಲ್ಲಿ ವಿತರಿಸಲಾಗಿದ್ದು ಹೆಮ್ಮೆಯ ವಿಷಯ. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಬಾಕಿ ಉಳಿದ ಫಲಾನುಭವಿಗಳಿಗೂ ಸೌಲಭ್ಯ ಒದಗಿಸಬೇಕು. ವಿವಿಧ ಇಲಾಖೆಗಳ ಮುಖಾಂತರ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಜಿಲ್ಲೆಗೆ ಒದಗಿಸಿದ ಅನುದಾನದಲ್ಲಿ ಶೇ. 15ರಷ್ಟನ್ನು ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟ ಅನುದಾನವನ್ನು ಅಲ್ಪಸಂಖ್ಯಾತರಿಗೆ ಸೌಲಭ್ಯ ಕಲ್ಪಿಸಬೇಕು. 2018-19ನೇ ಹಾಗೂ ಪ್ರಸಕ್ತ ಸಾಲಿನಲ್ಲಿ ತಮ್ಮ ಇಲಾಖೆಗಳಿಂದ ಅಲ್ಪಸಂಖ್ಯಾತರಿಗೆ ನೀಡುವ ಸೌಲಭ್ಯಗಳ ವಿವರ ಹಾಗೂ ಅರ್ಹ ಫಲಾನುಭವಿಗಳ ಆಯ್ಕೆ ಪಟ್ಟಿ ವರದಿಯನ್ನು ಸಲ್ಲಿಸಬೇಕು. ಫಲಾನುಭವಿಗಳು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸದೇ ಇದ್ದಲ್ಲಿ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಬೇಕು ಎಂದರು.

ಕ್ರಿಶ್ಚಿಯನ್‌ ಅಭಿವೃದ್ಧಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಸಮುದಾಯ ಭವನ, ಚರ್ಚ್‌ ದುರಸ್ತಿ, ಕಾಂಪೌಂಡ ಗೋಡೆ, ಸ್ಮಶಾನ ಕಾಂಪೌಡ್‌ ಗೋಡೆ ನಿರ್ಮಾಣಕ್ಕೆ ಜಿಲ್ಲೆಯಲ್ಲಿ ಒಟ್ಟು 14 ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿದೆ. ಜೈನ್‌ ಅಭಿವೃದ್ಧಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಎರಡು ಸಂಸ್ಥೆಗಳಿಗೆ ಒಟ್ಟು ರೂ. 65 ಲಕ್ಷ ಅನುದಾನ ಬಿಡುಗಡೆಯಾಗಿದೆ. ಪ್ರಸಕ್ತ ಸಾಲಿನಲ್ಲಿ 23 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಈ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ. ವಿದ್ಯಾಸಿರಿ ಯೋಜನೆಯಡಿ 150 ವಿದ್ಯಾರ್ಥಿಗಳಿಗೆ ಒಟ್ಟು ರೂ. 18 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಕಾನೂನು ತರಬೇತಿ ಭತ್ಯೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮೂರು ಅಭ್ಯರ್ಥಿಗಳಿಗೆ ತಿಂಗಳಿಗೆ ತಲಾ 5000 ದಂತೆ ಅನುದಾನ ಬಿಡುಗಡೆ ಮಾಡಿದೆ ಎಂದರು.

ಸಭೆಯಲ್ಲಿ ಎಡಿಸಿ ಸೈಯಿದಾ ಅಯಿಷಾ, ಜಂಟಿ ಕೃಷಿ ನಿರ್ದೇಶಕಿ ಶಬಾನಾ ಶೇಖ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶೋಭಾ ಬಾಗೇವಾಡಿ, ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಅಮ್ಜದ್‌ ಪಟೇಲ್ ಹಾಗೂ ಸಿರಾಜುದ್ದಿನ ಕರಮುಡಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next