ಬೆಳಗಾವಿ: ಜಿಲ್ಲೆಯಾದ್ಯಂತ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಯುವ ಜನಾಂಗಕ್ಕೆ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಿ ಪ್ರಾರಂಭಿಕ ಹಂತದಲ್ಲಿಯೇ ಪರೀಕ್ಷಿಸಿಕೊಂಡು ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಶಶಿಕಾಂತ ವಿ.ಮುನ್ಯಾಳ ಹೇಳಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲಾ ಕುಷ್ಠರೋಗ ವಿಭಾಗ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಸಹಯೋಗದಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ಅಂಗವಾಗಿ ಗುರುವಾರ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನವರಿ 30ರಿಂದ ಫೆಬ್ರುವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ಇದರ ಬಗ್ಗೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ತಿಳಿಸಬೇಕು. ಬೆಳಗಾವಿನಗರದ ಕೊಳಚೆ ಪ್ರದೇಶಗಳಲ್ಲಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಿ ಕುಷ್ಠ ರೋಗದಿಂದಬಳಲುತ್ತಿರುವವರನ್ನು ಗುರುತಿಸಿ ಅವರನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ|ಸಂಜಯ ಡುಮ್ಮಗೊಳ ಮಾತನಾಡಿ ಸ್ಪರ್ಶಕುಷ್ಠರೋಗ ಜಾಗೃತಿ ಅಭಿಯಾನದಲ್ಲಿ ಜಿಲ್ಲೆಯ ಎಲ್ಲ ಆರೋಗ್ಯ ಕಾರ್ಯಕರ್ತೆಯರು, ಆಶಾ ಹಾಗೂ ಆರ್‌ಬಿಎಸ್‌ಕೆ ತಂಡದವರು ಸಕ್ರಿಯವಾಗಿ ಭಾಗವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವಂತೆ ಕರೆ ನೀಡಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ| ಚಾಂದಿನಿ ಜಿ. ದೇವಡಿ ಮಾತನಾಡಿದರು. ಶಾರದಾ ಬನಗಾರ ಪ್ರಾರ್ಥಿಸಿದರು. ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ.ಯಲಿಗಾರ ಸ್ವಾಗತಿಸಿದರು. ಸಿ.ಜಿ. ಅಗ್ನಿಹೋತ್ರಿ ವಂದಿಸಿದರು. ಡಾ| ಅನಿಲ ಕೊರಬು ಉಪಸ್ಥಿತರಿದ್ದರು.