ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ| ಆರ್. ಸೆಲ್ವಮಣಿ ಹೇಳಿದರು.
ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಕ್ಲಬ್, ಸೈಕಲ್ ಕ್ಲಬ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ನವೀನ ವಿಧಾನಗಳ ಬಳಸೋಣ – ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ ಎಂಬ ಘೋಷಣೆಯಡಿ ಮಲೇರಿಯಾ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮನುಷ್ಯ ಅತ್ಯಂತ ಸಣ್ಣ ಕ್ರಿಮಿ ಸೊಳ್ಳೆಯಿಂದ ಹಾಗೂ ಅದರಿಂದ ಹರಡಬಹುದಾದ ಮಲೇರಿಯಾ, ಚಿಕೂನ್‌ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ಮುಂತಾದ ಕಾಯಿಲೆಗಳಿಂದ ವಿಶ್ವದಾದ್ಯಂತ ಲಕ್ಷಾಂತರ ಸಂಖ್ಯೆಯ ರೋಗಿಗಳು ನರಳುತ್ತಿರುವುದು ಮಾತ್ರವಲ್ಲ ಸಹಸ್ರಾರು ಸಂಖ್ಯೆಯ ಜನ ಮರಣ ಹೊಂದುತ್ತಿರುವುದು ನೋವಿನ ಸಂಗತಿಯಾಗಿದೆ ಎಂದರು.
ಜಿಲ್ಲಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಲೇರಿಯಾ ನಿಯಂತ್ರಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ 25645ಜನರ ರಕ್ತ ತಪಾಸಣೆ ನಡೆಸಿ, ತಪಾಸಣೆಯಲ್ಲಿ ಕೆಲವು ಸೋಂಕಿತರನ್ನು ಗುರುತಿಸಿ, ಅವರ ಚಿಕಿತ್ಸೆಗೆ ಸ್ಪಂದಿಸಲಾಗಿದೆ ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಗುಡದಪ್ಪ ಕುಸಬಿ ಮಾತನಾಡಿ, ಮಲೇರಿಯಾ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಎಲ್ಲಾ ಹಂತದಲ್ಲಿ ಮಲೇರಿಯಾ ನಿವಾರಣಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಆರೋಗ್ಯ ಇಲಾಖೆ ಸಕ್ರಿಯವಾಗಿದೆ ಎಂದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಿಂದ ಹೊರಟ ಸೈಕಲ್ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ಐಎಂಎ. ಹಾಲ್ ನಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ರೋಟರಿ, ಸೈಕಲ್ ಕ್ಲಬ್ ಸೇರಿದಂತೆ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.