ಶಿವಮೊಗ್ಗ: ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳಿಗೆ ಸರ್ಕಾರ ಬಿಡುಗಡೆಗೊಳಿಸಿದ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗದಂತೆ ನಿಗದಿಪಡಿಸಿದ ಕಾಲಮಿತಿಯೊಳಗೆ ಬಳಸಿ ನಿರೀಕ್ಷಿತ ಪ್ರಗತಿ ಸಾಧಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಸ್. ಸೆಲ್ವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ಸಾಗರ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಪ್ರಸಕ್ತ ಮಾಸಾಂತ್ಯದೊಳಗಾಗಿ ಆರಂಭಿಸುವಂತೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನುಷ್ಠಾನದಲ್ಲಿರುವ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಉಳಿದ ಫಲಾನುಭವಿಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಗಳ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಈ ಔಷಧ ಖರೀದಿ ಪ್ರಕ್ರಿಯೆ ವಿಳಂಬವಾಗದಂತೆ ಸಕಾಲದಲ್ಲಿ ಔಷಧ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಇದಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್ ಸುರಗೀಹಳ್ಳಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿನ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ನಿರಂತರವಾಗಿ ಹಾಗೂ ಸಕಾಲದಲ್ಲಿ ಔಷಧ ಒದಗಿಸಲಾಗುತ್ತಿದೆ. ಅಲ್ಲದೆ ಅಗತ್ಯಕ್ಕೆ ತಕ್ಕಂತೆ ಔಷಧ ದಾಸ್ತಾನು ಮಾಡಿಕೊಳ್ಳಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಆರೋಗ್ಯ ಇಲಾಖೆ ಹಾಗೂ ವೈದ್ಯಾಧಿಕಾರಿಗಳು ಸದಾ ಸನ್ನದ್ಧರಾಗಿರುವಂತೆ ನೋಡಿಕೊಳ್ಳಲಾಗಿದೆ. ಈ ಹಿಂದೆ ಗುರುತಿಸಲಾದ 2 ಕೊರೊನಾ ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಕೊರೊನಾ ಶೂನ್ಯವಾಗಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿರ್ಮಿಸಬೇಕಾದ 2 ಕಟ್ಟಡಗಳ ನಿರ್ಮಾಣ ಕಾರ್ಯವನ್ನು ಮುಂದಿನ 2 ತಿಂಗಳೊಳಗಾಗಿ ಟೆಂಡರ್ ಕರೆದು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರಲ್ಲದೇ ಶೈಕ್ಷಣಿಕವಾಗಿ ಶೇ.100 ರ ಪ್ರಗತಿ ಸಾಧಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ| ಆರ್.ಸೆಲ್ವಮಣಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಪ್ರಕಾಶ್, ಪ್ರೊಬೇಷನರಿ ಜಿಲ್ಲಾಧಿಕಾರಿ ದಲ್‌ಜಿತ್ ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.