Advertisement

ಆರೋಗ್ಯ ಕಾರ್ಡ್‌ ಸೌಲಭ್ಯ ಸದುಪಯೋಗಿಸಿಕೊಳ್ಳಿ

09:51 PM Sep 17, 2019 | Lakshmi GovindaRaju |

ಚಾಮರಾಜನಗರ: ಬಡವರ ಆರೋಗ್ಯ ಕಲ್ಯಾಣಕ್ಕಾಗಿ ನೀಡಲಾಗುತ್ತಿರುವ ಉಚಿತ ಆರೋಗ್ಯ ಕಾರ್ಡ್‌ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಪಂ ಅಧ್ಯಕ್ಷೆ ಶಿವಮ್ಮ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ವತಿಯಿಂದ ಆಯೋಜಿಸಲಾಗಿದ್ದ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯ ಕುರಿತ ಪಾಕ್ಷಿಕ ಆಚರಣೆಯ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisement

ಬಡವರಿಗೆ ಹೆಚ್ಚು ಉಪಯೋಗ: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯು ಬಡವರಿಗೆ ಬಹಳ ಉಪಯುಕ್ತವಾಗಿದೆ. ಈ ಯೋಜನೆಯಡಿ ಲಭ್ಯವಾಗುತ್ತಿರುವ‌ ಉಚಿತ ಆರೋಗ್ಯ ಕಾರ್ಡ್‌ಗಳ ಸೌಲಭ್ಯವು ಆರೋಗ್ಯ ದೃಷ್ಟಿಯಿಂದ ಜನರಿಗೆ ಪರಿಣಾಮಕಾರಿಯಾಗಿ ತಲುಪುತ್ತಿದೆ ಎಂದರು.

ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸೌಲಭ್ಯ: ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೋಯರ್‌ ಹರ್ಷಲ್‌ ನಾರಾಯಣ್‌ರಾವ್‌ ಮಾತನಾಡಿ, ಜನರಿಗೆ ಬೇಕಾದ ಮೂಲ ಸೌಲಭ್ಯಗಳಲ್ಲಿ ಆರೋಗ್ಯವೂ ಒಂದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆ ದುರ್ಬಲ ವರ್ಗದವರಿಗೆ ಬಹಳಷ್ಟು ಸಹಕಾರಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ಚಿಕಿತ್ಸೆಗೆ 5 ಲಕ್ಷ ಹಣ: ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗತಮಣಿ ಮಾತನಾಡಿ, ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆಯು ಬಹಳಷ್ಟು ಪ್ರಾಮುಖ್ಯತೆ ಹೊಂದಿದೆ. ಬಿ.ಪಿ.ಎಲ್‌ ಕಾರ್ಡ್‌ ಹೊಂದಿರುವ ಬಡವರ ಚಿಕಿತ್ಸೆಗೆ ಸಹಕಾರಿಯಾಗುವಂತೆ ವರ್ಷಕ್ಕೆ 5 ಲಕ್ಷ ರೂ. ಹಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಅನೇಕ ಬಡ ರೋಗಿಗಳಿಗೆ ಈ ಯೋಜನೆಯು ಸದುಪಯೋಗವಾಗುತ್ತಿದೆ ಎಂದರು.

ಹೆಚ್ಚು ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಾಮರಾಜನಗರ ವೈದ್ಯಕೀಯ ಕಾಲೇಜಿನ ಡೀನ್‌ ಮತ್ತು ನಿರ್ದೇಶಕ ಡಾ.ರಾಜೇಂದ್ರ ಮಾತನಾಡಿ, ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆಯಡಿ ಬಡವರು ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಜನರು ಹೆಚ್ಚಿನ ರೀತಿಯಲ್ಲಿ ತಿಳಿದು ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

4500 ಜನರಿಗೆ ಚಿಕಿತ್ಸೆ:
ಜಿಲ್ಲಾ ಶಸ್ತ್ರ ಚಿಕಿತ್ಸಗಾರ ಡಾ.ರಘುರಾಮ್‌ ಮಾತನಾಡಿ, ಆರೋಗ್ಯ ಕರ್ನಾಟಕ ಯೋಜನೆಯಡಿ ಮೊದಲನೇ ವರ್ಷ ಜಿಲ್ಲಾ ಆಸ್ಪತ್ರೆಯಲ್ಲಿ 4500 ಜನರಿಗೆ ಚಿಕಿತ್ಸೆ ನೀಡಲಾಗಿದ್ದು. 800 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ಕಳುಹಿಸಿಕೊಡಲಾಗಿದೆ ಎಂದರು. ಸರ್ಕಾರಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜಿಲ್ಲಾ ಆಡಳಿತ ಭವನದ ಆವರಣದಿಂದ ಜಾಥಾ ಪ್ರಾರಂಭಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು.

Advertisement

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಥಾ ಮುಕ್ತಾಯ ವಾಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಸಿ.ರವಿ, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಆರ್‌.ಸಿ.ಎಚ್‌.ಅಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಕಾಂತರಾಜು, ಡಾ.ಮಹದೇವ್‌, ಡಾ.ಮಹೇಶ್‌, ಡಾ.ಕೃಷ್ಣ ಸಾಗರ್‌, ಡಾ.ಗಣೇಶ್‌ ಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next