Advertisement

ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ

05:17 PM Nov 26, 2020 | sudhir |

ಹನೂರು (ಚಾಮರಾಜನಗರ): ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲ ಎಂದು ಉದಯವಾಣಿ ಪ್ರಕಟಿಸಿದ್ದ ವರದಿಗೆ ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ ಅವರಿಂದ ಸ್ಪಂದನೆ ದೊರೆತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಗುರುವಾರ ಭರವಸೆ ನೀಡಿದರು.

Advertisement

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ 110 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹದೇಶ್ವರ ಬೆಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕೆಂಬುದು ಇಲ್ಲಿನ ಜನರ ಅಪೇಕ್ಷೆಯಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಿ: ಶೆಟ್ಟರ್‌

29 ಗ್ರಾಮಗಳ ವ್ಯಾಪ್ತಿಯ 18 ಸಾವಿರ ಜನಸಂಖ್ಯೆಯುಳ್ಳ ಹಾಗೂ ಪ್ರತಿ ವರ್ಷ 50 ಲಕ್ಷ ಜನರು ಭೇಟಿ ನೀಡುವ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲ ಎಂದು ಉದಯವಾಣಿ ಗುರುವಾರದ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು.

ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಪ್ರಾಕೃತಿಕ ಸೊಬಗಿನಿಂದ ಕೂಡಿರುವ ಧಾರ್ಮಿಕ ಕೇಂದ್ರವಾಗಿದ್ದು ಇಲ್ಲಿಗೆ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಈ ಕ್ಷೇತ್ರವು ಪ್ರವಾಸೋದ್ಯಮದ ಅಭಿವೃದ್ಧಿಗೂ ಪೂರಕವಾದ ಕ್ಷೇತ್ರವಾಗಿದ್ದು, ಸುಂದರವಾದ ಭಕ್ತಿಪೂರ್ವಕ ಪ್ರವಾಸಿ ತಾಣವನ್ನಾಗಿಸುವುದು ಸರ್ಕಾರ ಮತ್ತು ಪ್ರಾಧಿಕಾರದ ಉದ್ದೇಶವಾಗಿದೆ. ಈ ಹಿನ್ನೆಲೆ ಇಂದು 14 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ್ದು 110 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

Advertisement

ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಹನೂರು ಕ್ಷೇತ್ರ ಶಾಸಕ ಆರ್‍.ನರೇಂದ್ರ ಅವರು ಸಹ ತಮ್ಮ ಭಾಷಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.

ಇದನ್ನು ಸಹ ಪ್ರಸ್ತಾಪಿಸಿದ ಮುಖ್ಯಮಂತ್ರಿಯವರು, ನರೇಂದ್ರ ಅವರ ಕೋರಿಕೆಯಂತೆ ಹಣಕಾಸಿನ ಇತಿಮಿತಿಯೊಳಗೆ ಅನುದಾನ ಬಿಡಗಡೆ ಮಾಡುವ ಮೂಲಕ ಹನೂರು ಕ್ಷೇತ್ರದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಇದೇ ವೇಳೆ ಮುಖ್ಯಮಂತ್ರಿಗಳು ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳೋಣ ಮತ್ತು ಪಾಕೃತಿಕ ಸೊಬಗಿನಿಂದ ಕೂಡಿರುವ ಸುಂದರ ಪರಿಸರ ಮತ್ತು ಸುತ್ತಮುತ್ತಲ ಪ್ರದೇಶವನ್ನು ಪ್ಲಾಸ್ಟಿಕ್ ಮತ್ತು ಇನ್ನಿತರ ತ್ಯಾಜ್ಯಗಳಿಂದ ಮುಕ್ತಗೊಳಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖಾ ಸಚಿವ ಗೋವಿಂದ ಕಾರಜೋಳ ಮಾತನಾಡಿ ಕಳೆದ 15 ತಿಂಗಳ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದೆ. ಕಳೆದ ಸಾಲು ಮತ್ತು ಪ್ರಸಕ್ತ ಸಾಲಿನಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 60 ಸಾವಿರ ಕೋಟಿ ಆರ್ಥಿಕ ನಷ್ಟ ಉಂಟಾಗಿದೆ. ಅಲ್ಲದೆ ಕೊರೋನಾ ಹಿನ್ನೆಲೆ ನಿರೀಕ್ಷಿತ ಆದಾಯ ಬಾರದಿದ್ದರೂ ಅಭಿವೃದ್ಧಿ ಯೋಜನೆಗಳು ಕುಂಠಿತವಾಗದ ರೀತಿಯಲ್ಲಿ ಅನುದಾನ ನೀಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಕಳೆದ 15 ತಿಂಗಳ ಅವಧಿಯಲ್ಲಿ ಲೋಕೋಪಯೋಗ ಇಲಾಖೆಯ ಮೂಲಕ 380 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಮಳೆ ಬಂದರ ಕೆಟ್ಟಿಲ್ಲಂತ, ಮಗ ಉಂಡ್ರ ಕೆಟ್ಟಿಲ್ಲಂತ: ಯಡಿಯೂರಪ್ಪ ಅವರು ರಾಜ್ಯದಲ್ಲಿ ಯಾವ ಯಾವ ಅವಧಿಯಲ್ಲಿ ಅಧಿಕಾರದಲ್ಲಿದ್ದಾರೋ ಆ ಅವಧಿಯಲ್ಲಿ ಮಳೆ ಹೆಚ್ಚಾಗುತ್ತಿದೆ. ಅವರು ಅಧಿಕಾರದಲ್ಲಿದ್ದರೆ ರಾಜ್ಯದಲ್ಲಿ ಹಸಿರ ಇರುತ್ತದೆಯೋ ಹೊರತು ಒಣ ಬರವಿರುವುದಿಲ್ಲ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಮಳೆ ಬಂದರೆ ಕೆಟ್ಟಿಲ್ಲಂತ, ಮಗ ಉಂಡ್ರ ಕೆಟ್ಟಿಲ್ಲಂತ ಎಂಬ ನಾಣ್ಣುಡಿಯಿದೆ. ಆದುದರಿಂದ ಯಡಿಯೂರಪ್ಪ ಅವರ ಕಾಲ ನಾಡು ಸುಭಿಕ್ಷವಾಗಿರಲಿ, ಇದಕ್ಕೆ ಮಹದೇಶ್ವರರು, ಶರಣ ಸಂತರು ಆಶೀರ್ವದಿಸಲಿ ಎಂದು ಹಾರೈಸಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಮಂತ್ರಿಗಳು ಮತ್ತು ಶಾಸಕರು ಶ್ರೀಕ್ಷೇತ್ರದ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನೆರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next