ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ವಿರುದ್ಧ ಸ್ಪಷ್ಟ ಜನಾದೇಶವಾಗಿದ್ದು ಇದು ಅವರ “ನೈತಿಕ ಮತ್ತು ರಾಜಕೀಯ ಸೋಲು” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲೋಕ ಸಭಾ ಚುನಾವಣೆಯಲ್ಲಿ ಜನರು ಸ್ಪಷ್ಟ ಜನಾದೇಶ ನೀಡಿದ್ದಾರೆ ಇದರೊಂದಿಗೆ ನರೇಂದ್ರ ಮೋದಿ ಅವರ ಆಡಳಿತದ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ 233 ಸೀಟುಗಳು ಲಭಿಸಿದ್ದು ಮುಂದಿನ ದಿನಗಳಲ್ಲಿ ಮಿತ್ರ ಪಕ್ಷಗಳು ಜೊತೆಗೂಡಲಿದೆ ಎಂದು ಹೇಳಿಕೊಂಡಿದ್ದಾರೆ.
ಈ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಇಂಡಿಯಾ ಬಣ ಸರ್ಕಾರ ರಚಿಸಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ನಾಳೆ ನಡೆಯುವ ಇಂಡಿಯಾ ಒಕ್ಕೂಟದ ಸಭೆಯಲ್ಲಿ ಈ ವಿಚಾರದ ಕುರಿತು ಚರ್ಚೆ ನಡೆಸಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ಆರಂಭದಿಂದ ಕೊನೆಯವರೆಗೂ ಒಂದೇ ನಿರ್ಧಾರಕ್ಕೆ ಬದ್ದವಾಗಿತ್ತು. ಅಲ್ಲದೆ ಹಣದುಬ್ಬರ, ನಿರುದ್ಯೋಗ, ರೈತರ ಸಮಸ್ಯೆ ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಹೆಚ್ಚು ಪ್ರಚಾರ ಮಾಡಿದ್ದಕ್ಕಾಗಿ ಮತದಾರರು ನಮ್ಮ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಮೋದಿಯವರು ಹರಡಿದ ಸುಳ್ಳುಗಳನ್ನು ಸಾರ್ವಜನಿಕರು ಅರ್ಥಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು.
ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡೂ ಪ್ರವಾಸಗಳಲ್ಲಿ ಲಕ್ಷಗಟ್ಟಲೆ ಜನರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿ ನಂತರ ಆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಕಾಂಗ್ರೆಸ್‌ನ ಮೂಲ ಉದ್ದೇಶವಾಗಿತ್ತು. ರಾಹುಲ್ ಗಾಂಧಿ ಅವರ ಈ ಯಾತ್ರೆ ನಮ್ಮ ಕೈ ಹಿಡಿಯಿತು ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Loksabha: ಉತ್ತರ ಪ್ರದೇಶದಲ್ಲಿ ಎಸ್.ಪಿ- ಕಾಂಗ್ರೆಸ್ ಗೆಲುವಿನ ಹಿಂದಿನ ರಹಸ್ಯವೇನು?