Advertisement

ಉದ್ದಿಮೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಬದ್ಧತೆ ಅಗತ್ಯ

12:09 PM Oct 07, 2017 | Team Udayavani |

ಬೆಂಗಳೂರು: ನಷ್ಟದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ವ್ಯವಸ್ಥಾಪಕ ನಿರ್ದೇಶಕರು ದಕ್ಷತೆಯಿಂದ ಕಾರ್ಯ ನಿರ್ವಹಿಸಿದರೆ, ಅದನ್ನು ಲಾಭದಾಯಕ ಸಂಸ್ಥೆಯಾಗಿ ರೂಪಿಸಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸಾರ್ವಜನಿಕ ಉದ್ದಿಮೆಗಳ ಇಲಾಖೆಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮೈಸೂರು ಮಿನರಲ್ಸ್‌ ಲಿಮಿಟೆಡ್‌(ಎಂಎಂಎಲ್‌), ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ(ಕೆಎಸ್‌ಬಿಸಿಎಲ್‌) ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಎಸ್‌ಐಡಿಸಿ) ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ರಾಜ್ಯದ 60 ಸಾರ್ವಜನಿಕ ಉದ್ದಿಮೆಗಳ ಪೈಕಿ 14 ಉದ್ದಿಮೆಗಳು ನಷ್ಟದಲ್ಲಿವೆ. ಈ ಉದ್ದಿಮೆಗಳ ವ್ಯವಸ್ಥಾಪಕ ನಿರ್ದೇಶಕರು(ಎಂಡಿ) ದಕ್ಷತೆಯಿಂದ ಕಾರ್ಯ ನಿರ್ವಹಿಸಿದರೆ, ಲಾಭದಾಯಕ ಸಂಸ್ಥೆಯಾಗಿ ರೂಪಿಸಲು ಸಾಧ್ಯವಿದೆ. ಸಾರ್ವಜನಿಕ ಉದ್ದಿಮೆಗಳ ಅಧಿಕಾರೇತರ ನಿರ್ದೇಕರಿಗೆ ತರಬೇತಿ ನೀಡುವುದಕ್ಕಿಂತ ಹೆಚ್ಚಾಗಿ ವ್ಯವಸ್ಥಾಪಕ ನಿರ್ದೇಶಕರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದರು.

ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ಲಾಭ ಗಳಿಸುವಂತೆ, ಸಾರ್ವಜನಿಕ ಉದ್ದಿಮೆಗಳನ್ನು ಲಾಭದ ಹಾದಿಯಲ್ಲಿ ಕೊಂಡೊಯ್ಯಲು ವ್ಯವಸ್ಥಾಪಕ ನಿರ್ದೇಶಕರು ಬದ್ಧತೆಯಿಂದ ಕೆಲಸ ಮಾಡಬೇಕು. ರಾಜ್ಯ ಸರ್ಕಾರ ಸಾರ್ವಜನಿಕ ಉದ್ದಿಮೆಗಳ ಮೇಲೆ 18,700 ಕೋಟಿ ರೂ.ಗಳ ಹೂಡಿಕೆ ಮಾಡಿದೆ. ಲಾಭ ತಂದುಕೊಡಲು ಸಾಧ್ಯವಾಗದಿದ್ದರೂ, ಸಂಸ್ಥೆ ನಷ್ಟದಲ್ಲಿ ನಡೆಯದಂತೆ ಎಚ್ಚರ ವಹಿಸಲು ಸೂಚಿಸಿದರು.

ಪ್ರಶಸ್ತಿ ಮೊತ್ತ ಹೆಚ್ಚಳ
ಸಾರ್ವಜನಿಕ ಉದ್ದಿಮೆ ಇಲಾಖೆಯಿಂದ ಕೊಡಮಾಡುವ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿಯ ಮೊತ್ತವನ್ನು 5 ಲಕ್ಷದಿಂದ 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಸರ್ಕಾರದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಹಲವು ಸಾರ್ವಜನಿಕ ಸಂಸ್ಥೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಪೌರಾಡಳಿತ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಮೊದಲಾದವರು ಉಪಸ್ಥಿತರಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next