ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಕೆಮ್ಮು, ನೆಗಡಿ, ತೀವ್ರ ಜ್ವರ (ಐಎಲ್‌ಐ) ಮತ್ತು ತೀವ್ರ ಉಸಿರಾಟದ ತೊಂದರೆ (ಎಸ್‌ಎಆರ್‌ಐ) ಲಕ್ಷಣಗಳಿರುವ ಎಲ್ಲರನ್ನೂ ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವುದು ಅವಶ್ಯ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದರು.
ಆರೋಗ್ಯ ಕಾರ್ಯಪಡೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿನಿತ್ಯ ದಾಖಲಾಗುವ ಈ ಎಲ್ಲ ಪ್ರಕರಣಗಳನ್ನು ಶೇ.100 ತ್ವರಿತವಾಗಿ ತಪಾಸಣೆಗೊಳಪಡಿಸಬೇಕು. ಕೋವಿಡ್ ಹರಡುವಿಕೆ ನಿಯಂತ್ರಿಸಲು ತ್ವರಿತ ತಪಾಸಣೆ ಅತಿಮುಖ್ಯ ಎಂದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನಿರಾಕರಿಸಬಾರದು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಅರ್ಹ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ನಿರಂತರವಾಗಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಯಶವಂತ ಮದೀನಕರ ಮಾತನಾಡಿ, ಜಿಲ್ಲೆಯ ಕಿಮ್ಸ್‌ನಲ್ಲಿ 160, ಎಸ್‌ಡಿಎಂನಲ್ಲಿ 4, ಹಾಗೂ ಸಂಜೀವಿನಿ ಆಯುರ್ವೇದ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ 22 ಸೇರಿ ಒಟ್ಟು 186 ಸಕ್ರಿಯ ಪ್ರಕರಣಗಳು ಇವೆ. ಜು. 1ರಂದು ವರದಿಯಾದ ತೀವ್ರ ಉಸಿರಾಟದ ತೊಂದರೆ ಇರುವ ಎಲ್ಲಾ 8 ಪ್ರಕರಣಗಳು ಹಾಗೂ 90 ಐಎಲ್‌ಐ ಪ್ರಕರಣಗಳಲ್ಲಿ 75 ಪ್ರಕರಣಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಪಾಲಿಕೆ ಆಯುಕ್ತರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.
ಜಿಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ : ನೂತನ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಗುರುವಾರ ದಿಢೀರನೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆಗಳ ಸಾಮರ್ಥ್ಯದ ನವಜಾತ ಶಿಶುಗಳ ಆಸ್ಪತ್ರೆ ಹಾಗೂ 115 ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಕೋವಿಡ್ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಇತರ ರೋಗಿಗಳ ವಿಭಾಗದ ವೈದ್ಯರು ಅಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಅಗತ್ಯವಿರುವುದನ್ನು ಮನಗಂಡ ಜಿಲ್ಲಾಧಿಕಾರಿಗಳು ಆಸ್ಪತ್ರೆಯ ತಜ್ಞವೈದ್ಯರು, ಸಿಬ್ಬಂದಿ ಹಾಗೂ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಶಿವಕುಮಾರ ಮಾನಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಯಶವಂತ ಮದೀನಕರ, ಕೆ.ಎಚ್. ಎಸ್. ಆರ್‌ಡಿಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಮತ್ತಿತರರು ಇದ್ದರು.
5 ರವಿವಾರ ಮದ್ಯ ನಿಷೇಧ : ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಪ್ರತಿ ರವಿವಾರ ಮದ್ಯ ಮಾರಾಟ ನಿಷೇಧಕ್ಕೆ ಮುಂದಾಗಿದ್ದು, ಮುಂದಿನ ಐದು ರವಿವಾರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಜುಲೈ 5, 12, 19, 26 ಮತ್ತು ಆ. 8ರ ರವಿವಾರ ಜಿಲ್ಲೆಯಲ್ಲಿ ಮದ್ಯ ಉತ್ಪಾದನೆ, ಮಾರಾಟ, ಸಾಗಾಟ, ಪೂರೈಕೆಯನ್ನು ನಿಷೇಧಿಸಲಾಗಿದೆ. ರವಿವಾರ ಸಂಪೂರ್ಣ ದಿನ ಅಂದರೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆ ವರೆಗೂ ಮದ್ಯ ನಿಷೇಧಿಸಿದ್ದು, ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಹು-ಧಾ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅಬಕಾರಿ ಉಪ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.