Advertisement

Mandya Loksabha: ಮುಂದಿನ ನಿರ್ಧಾರ ಪ್ರಕಟಿಸಲು ಮುಹೂರ್ತ ನಿಗದಿ ಮಾಡಿದ ಸುಮಲತಾ

05:45 PM Apr 02, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದು ಟಿಕೆಟ್‌ ಕೈತಪ್ಪಿದ ಬಳಿಕ ಹಲವು ಸಭೆ ನಡೆಸಿರುವ ಸಂಸದೆ ಸುಮಲತಾ ಅವರು ಇದೀಗ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಲು ಮುಹೂರ್ತ ನಿಗದಿ ಮಾಡಿದ್ದಾರೆ. ಏಪ್ರಿಲ್ 3ರ ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದ ಆವರಣದಲ್ಲಿ ತನ್ನ ಮುಂದಿನ ನಿಲುವಿನ ಬಗ್ಗೆ ಪ್ರಕಟಿಸಲಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.

Advertisement

ಟಿಕೆಟ್ ಕೈತಪ್ಪುವುದು ಖಚಿತವಾದ ಬಳಿಕ ಸುಮಲತಾ ಅವರು ಬೆಂಬಲಿಗರ ಸಭೆ ನಡೆಸಿದ್ದರು. ಅಲ್ಲದೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರೊಂದಿಗೂ ಚರ್ಚೆ ನಡೆಸಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಬುಧವಾರ ತನ್ನ ನಿರ್ಧಾರ ಪ್ರಕಟಿಸುವುದಾಗಿ ಹೇಳಿಕೊಂಡಿದ್ದಾರೆ.

ಸುಮಲತಾ ಅವರ ಪೋಸ್ಟ್ ನ ಪ್ರತಿ ಇಲ್ಲಿದೆ.

ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ,

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

Advertisement

ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ  ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ.

ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ.

Advertisement

Udayavani is now on Telegram. Click here to join our channel and stay updated with the latest news.

Next