ಬೆಂಗಳೂರು: ಮಂಗಳೂರು ಕುಕ್ಕರ್ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಹತ್ವದ ಸಾಕ್ಷ್ಯ ಕಲೆ ಹಾಕುವಲ್ಲಿ ನಿರತವಾಗಿದೆ.
ನ.19ರಂದು ಮಂಗಳೂರಿನಲ್ಲಿ ನಡೆದ ಕುಕ್ಕರ್ ಪ್ರಕರಣದ ಹಿಂದೆ ಉಗ್ರ ಸದಸ್ಯರು ಶಾಮೀಲಾಗಿರುವ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಎನ್ಐಎ ತನಿಖಾಧಿಕಾರಿಗಳು ಪ್ರಕರಣ ಕೈಗೆತ್ತಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಶಾರೀಕ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಗ್ರ ಚಟುವಟಿಕೆಯ ನಂಟಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದ್ದು, ಸ್ಥಳೀಯ ಪೊಲೀಸರಿಗೆ ಕೇಂದ್ರೀಯ ತನಿಖಾ ಸಂಸ್ಥೆಗಳ ನೆರವು ಅನಿವಾರ್ಯವಾಗಿದೆ. ಹೀಗಾಗಿ ರಾಜ್ಯ ಸರಕಾರ ಈ ಪ್ರಕರಣವನ್ನು ಎನ್ಐಎಗೆ ಒಪ್ಪಿಸಿದೆ.
ರಾಜ್ಯದ ಪೊಲೀಸರು ಈಗಾಗಲೇ ಶಾರೀಕ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ಎನ್ಐಎ ಅಧಿಕಾರಿಗಳು ಸಾಕ್ಷ್ಯ ಕಲೆ ಹಾಕುವಲ್ಲಿ ನಿರತರಾಗಿದ್ದು, ಶಾರೀಕ್ ಜತೆಗೆ ಸಂಪರ್ಕದಲ್ಲಿದ್ದ ಅಂತಾರಾಷ್ಟ್ರೀಯ ಮಟ್ಟದ ಉಗ್ರರ ಜಾಡು ಹಿಡಿಯುವಲ್ಲಿ ನಿರತರಾಗಿದ್ದಾರೆ. ಪ್ರಕರಣದಲ್ಲಿ ಶಾರೀಕ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆತನ ಆರೋಗ್ಯ ಸುಧಾರಣೆಯಾಗಿದೆ ಎಂದು ತಿಳಿದು ಬಂದಿದೆ.