ಮಂಗಳೂರು: ಮಗಳ ತಲೆಗೆ ಹೊಡೆದ ತಂದೆಗೆ ಮಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಜೋಯಿ ಕೆ. ಶಿಕ್ಷೆಗೊಳಗಾದನು. 2021ರ ಮೇ 17ರಂದು ಜೋಯಿ ಕೆ. ತನ್ನ ದೊಡ್ಡ ಮಗಳು ಔಷಧಿ ಕುಡಿಯಲಿಲ್ಲ ಎಂಬ ಕಾರಣಕ್ಕೆ ಆಕೆಯ ತಲೆಗೆ ಕೈಯಿಂದ ಹೊಡೆದಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಉಪನಿರೀಕ್ಷಕ ಕೆ.ಚಂದ್ರಶೇಖರ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್‌ಸಿ-1) ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ನ.25ರಂದು ಆರೋಪಿಗೆ ಭಾರತೀಯ ದಂಡ ಸಂಹಿತೆ 323ರಡಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು. ಆರೋಪಿ ವಿರುದ್ಧ ಪೋಕ್ಸೊ ಕಾಯಿದೆಯಡಿಯೂ ಪ್ರಕರಣ ದಾಖಲಾಗಿತ್ತು.
Related Articles