Advertisement

ಮಂಗಳೂರು ಗೋಲಿಬಾರ್‌ ತನಿಖೆಗೆ ಎಸ್‌ಐಟಿ ರಚನೆ ಕೋರಿ ಅರ್ಜಿ:ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

10:04 AM Jan 29, 2020 | sudhir |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ 2019ರ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿ ಪೊಲೀಸ್‌ ಗೋಲಿಬಾರ್‌ ಘಟನೆ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌, ದೊರೆಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿ ಫೆ.4ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿತು.

ಜೊತೆಗೆ ಘಟನೆ ನಡೆದ ಸಂದರ್ಭದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿಡುವಂತೆ ನಗರ ಪೊಲೀಸ್‌ ಆಯುಕ್ತರಿಗೆ ನ್ಯಾಯಪೀಠ ಸೂಚನೆ ನೀಡಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಮತ್ತೂಂದು ಅರ್ಜಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ಹೇಳಿತು.

ಘಟನೆಯ ತನಿಖೆಗೆ ಎಡಿಜಿಪಿ ದರ್ಜೆ ಹಿರಿಯ ಪೊಲೀಸ್‌ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಘಟನೆಯಲ್ಲಿ ಗಾಯಗೊಂಡವರು ಹಾಗೂ ಮೃತರ ಕುಟುಂಬದವರು ನೀಡಿರುವ ಎಲ್ಲಾ ದೂರುಗಳಿಗೆ ಎಫ್ಐಆರ್‌ ದಾಖಲಿಸಿಕೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಬೇಕು.

Advertisement

ಅಲ್ಲದೇ ಘಟನೆ ನಡೆದ 2019ರ ಡಿ.19ರ ಬೆಳಿಗ್ಗೆ 10 ಗಂಟೆಯಿಂದ ಡಿ.20ರ ಮಧ್ಯಾಹ್ನ 1 ಗಂಟೆವರೆಗೆ ಪೊಲೀಸರು, ಸ್ಥಳೀಯ ಆಡಳಿತ ಹಾಗೂ ಖಾಸಗಿ ಅಂಗಡಿ ಮಾಲಿಕರು ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಸಂರಕ್ಷಿಸಿಡುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next