ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತರು.
ನ.17 ರಂದು ಇಬ್ಬರು ಕೇರಳ ನೋಂದಣಿಯ ಎಸ್‌ಯುವಿ ಕಾರಿನಲ್ಲಿ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದಿದ್ದರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರ ತಂಡ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನ ಕುರ್ನಾಡು ಗ್ರಾಮದ ಕಾಯರ್‌ಗೋಳಿ ಎಂಬಲ್ಲಿ ಆರೋಪಿಗಳ ಕಾರು ಪತ್ತೆ ಹಚ್ಚಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ.
ಆರೋಪಿಗಳು ಬಳಕೆಗೆ ಸಿದ್ದವಾಗಿದ್ದ ಗಾಂಜಾವನ್ನು ಮಾದಕವಸ್ತು ವ್ಯಾಪಾರಿಗಳಿಗೆ ವಿತರಿಸಲು ಕೊಂಡೊಯ್ಯುತ್ತಿದ್ದರು. ಕೇರಳ, ಮಣಿಪಾಲ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಿಗೆ ವ್ಯಾಪಾರಿಗಳಿಗೆ ನೀಡಲೆಂದು ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Related Articles
ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ, ಅದಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿದೆ.
ಮತ್ತೊಬ್ಬ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳಿಬ್ಬರೂ ಕರ್ನಾಟಕ- ಕೇರಳ ರಾಜ್ಯದ ಗಡಿಭಾಗದವರಾಗಿದ್ದು, ಕರ್ನಾಟಕ, ಕೇರಳ, ಬೆಂಗಳೂರಿನ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬಾಡಿಗೆಗೆ ಕಾರನ್ನು ಪಡೆದುಕೊಂಡು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿ ಬೆಂಗಳೂರು, ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಬೃಹತ್ ಗಾಂಜಾ ಮಾರಾಟ ಹಾಗೂ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಸನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತದೆ.
ಈ ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್‌ಐ ರಾಜೇಂದ್ರ ಬಿ, ಎಎಸ್‌ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ.ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.