ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು.
ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ| ರೊನಾಲ್ಡ್ ಕೊಲಾಸೋ ಅವರಿಗೆ ಗೌರವ ಡಾಕ್ಟರೆಟ್ ಪ್ರದಾನಿಸಿದರು. ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ| ತುಂಬೆ ಮೊಯ್ದೀನ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.
155 ಮಂದಿಗೆ ಪಿಎಚ್.ಡಿ, 58 ಚಿನ್ನದ ಪದಕ ಮತ್ತು 57 ನಗದು ಬಹುಮಾನ ಪ್ರದಾನ ಮಾಡಿದರು.
ಉನ್ನತ ಶಿಕ್ಷಣ ಸಚಿವ, ಸಹಕುಲಾಧಿಪತಿ ಡಾ| ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ನವದೆಹಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ ಮಹಾನಿರ್ದೇಶಕ ಪ್ರೊ| ಸಚಿನ್ ಚತುರ್ವೇದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.
ವಿ.ವಿ. ಕುಲಪತಿ ಪ್ರೊ| ಪಿ.ಎಲ್. ಧರ್ಮ ಪ್ರಸ್ತಾವಿಸಿದರು. ಕುಲಸಚಿವ (ಆಡಳಿತ) ರಾಜು ಮೊಗವೀರ, ಕುಲಸಚಿವ (ಪರೀಕ್ಷಾಂಗ) ಡಾ| ದೇವೇಂದ್ರಪ್ಪ, ವಿ.ವಿ.ಯ, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.