ಇಂಫಾಲ್: ಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಇಂಫಾಲ್ ಕಣಿವೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇದರಂತೆ ಜನ ಜೀವನ ಸಹಜ ಸ್ಥಿತಿಗೆ ಮರಳಿದ್ದು. ಅಂಗಡಿಗಳು ಮತ್ತು ಮಾರುಕಟ್ಟೆಗಳು ಎಂದಿನಂತೆ ಆರಂಭವಾಗಿವೆ. ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹ ಆರಂಭವಾಗಿದೆ.
ಹೆಚ್ಚಿನ ಸೇನಾ ಪಡೆಗಳು, ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಕೇಂದ್ರ ಪೊಲೀಸ್ ಪಡೆಗಳ ನಿಯೋಜನೆ ಮೂಲಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ಇದುವರೆಗೆ 54 ಮಂದಿ ಮೃತಪಟ್ಟಿದ್ದು, ಈ ಪೈಕಿ 16 ಶವಗಳನ್ನು ಚುರಾಚಂದ್‌ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, 15 ಮೃತದೇಹಗಳು ಇಂಫಾಲ್ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.