Advertisement

Constitution ವಿರೋಧಿ ಶಕ್ತಿಗಳಿಂದ ಮನುಸ್ಮೃತಿ ಜಾರಿಗೆ ಹುನ್ನಾರ : ಸಿಎಂ ಸಿದ್ದರಾಮಯ್ಯ

02:28 PM Sep 15, 2023 | Team Udayavani |

ಬೆಂಗಳೂರು: ”ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಶುಕ್ರವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಸಿಎಂ ಉದ್ಘಾಟಿಸಿದರು.

”ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ.ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿದೆ” ಎಂದು ಹೇಳಿದರು.

“We the people of India” ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next