ಬೆಂಗಳೂರು: ನೂತನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಯೋಜನೆಯ ಅಂಗವಾಗಿ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿದೆ. ಇದೀಗ ಯೋಜನೆ ಸಂಬಂಧ ಷರತ್ತು ಮತ್ತು ನಿಬಂಧನೆಗಳ ಕುರಿತು ಆದೇಶ ಹೊರಡಿಸಿದೆ.
ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯುನಿಟ್ ವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯುನಿಟ್ ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆ ಮಿತಿಯನ್ನು ಅನುಮತಿಸಲಾಗಿದೆ.
ಇದನ್ನೂ ಓದಿ:ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
Related Articles
ಈ ಯೋಜನೆಯು ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಿನಲ್ಲಿ ನೀಡುವ ಬಿಲ್ಲಿಗೆ ಅನ್ವಯವಾಗುತ್ತದೆ.
ನಿಯಮಗಳು
200 ಯುನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು.
ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಬಳಸಿದ್ದಲ್ಲಿ ಅನ್ವಯವಾಗುವುದಿಲ್ಲ.
ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುತ್ತದೆ.
ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡಲಾಗುತ್ತದೆ ಹಾಗೂ ಗ್ರಾಹಕರು ಈ ಬಿಲ್ ಪಾವತಿಸಬೇಕು.
ಅರ್ಹ ಯುನಿಟ್/ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ.
ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಪ್ರತಿ ಫಲಾನುಭವಿಯು ತನ್ನ customer ID/ Account ID ಕಡ್ಡಾಯವಾಗಿ ಆಧಾರ್ ಗೆ ಜೋಡಣೆ ಮಾಡಬೇಕು.
ಪ್ರಸ್ತುತ ಜಾರಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳಿಗೂ ಈ ಯೋಜನೆಯಲ್ಲಿ ಸೇರಬಹುದು.
2023ರ ಜೂನ್ 20 ಅಂತ್ಯಕ್ಕೆ (ಜೂನ್ ನಲ್ಲಿ ಬಳಸಿದ ವಿದ್ಯುತ್ ಗೆ ಜುಲೈನಲ್ಲಿ ನೀಡುವ ವಿದ್ಯುತ್ ಬಿಲ್ ಸೇರಿದಂತೆ) ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಮೂರು ತಿಂಗಳೊಳಗೆ ಪಾವತಿಸಬೇಕು. ಅವಧಿಯೊಳಗೆ ಪಾವತಿ ಮಾಡದಿದ್ದಲ್ಲಿ ಅಂತವರ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತದೆ.
ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕ ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
ಗೃಹ ಬಳಕೆಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮೀಟರ್ ಇದ್ದಲ್ಲಿ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.