Advertisement

ಮಾ. 28ರಿಂದ ಎ. 11: ಎಸೆಸೆಲ್ಸಿ ಪರೀಕ್ಷೆ : ಪರೀಕ್ಷಾ ಪಾವಿತ್ರ್ಯ ಕಾಪಾಡಿ: ಡಿಸಿ

02:44 AM Mar 23, 2022 | Team Udayavani |

ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಮಾ. 28 ರಿಂದ ಎ. 11ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷಾ ಪಾವಿತ್ರ್ಯ ಕಾಪಾಡುವುದರೊಂದಿಗೆ ವ್ಯವಸ್ಥಿತವಾಗಿ ನಡೆಸಬೇಕು. ಜಿಲ್ಲೆಯು ಈ ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಬರಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ
266 ಶಾಲೆಗಳ 7,229 ಬಾಲಕರು, 6,793 ಬಾಲಕಿಯರು ಸೇರಿ 14,022 ಜನ ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಅವರಲ್ಲಿ 13,672 ಹೊಸ ಹಾಗೂ 298 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ 58 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಈ ಬಾರಿ ಜಿಲ್ಲೆಯು ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆಯಬೇಕು. ಪರೀಕ್ಷಾ ಕೇಂದ್ರಕ್ಕೆ ಯಾವುದೇ ವಿದ್ಯಾರ್ಥಿಯೂ ಗೈರು ಹಾಜರಾಗದಂತೆ ಎಚ್ಚರ ವಹಿಸ ಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರ
ಗಳಲ್ಲಿಯೂ ಸಿಸಿಟಿವಿಗಳನ್ನು ಅಳವಡಿಸಬೇಕು, ಅವುಗಳ ಕಾರ್ಯ ನಿರ್ವಹಣೆಯು ಉತ್ತಮವಾಗಿದೆ ಎಂಬ ಬಗ್ಗೆ ಪರಿಶೀಲಿಸಿ 2 ದಿನ ಮುಂಚಿತವಾಗಿ ವರದಿ ನೀಡಬೇಕು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು, ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಿರುವ ಸಿಬಂದಿ ನೇಮಕ ಮಾಡಿಕೊಳ್ಳುವ ಜತೆ ಹೆಚ್ಚುವರಿ ಸಿಬಂದಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಸರಕಾರದ ಸೂಚನೆಯನ್ವಯ ಕೋವಿಡ್‌-19ರ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಇದಕ್ಕೆ ಅಗತ್ಯವಿರುವ ಇತರ ಇಲಾಖೆಗಳ ಸಹಕಾರವನ್ನು ಪಡೆಯಬೇಕು. ಆರೋಗ್ಯ ಇಲಾಖೆಯ ಸಿಬಂದಿಯನ್ನು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗುತ್ತದೆ. ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು, ಜೆರಾಕ್ಸ್‌ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗುವುದು. ಕೇಂದ್ರದ ಒಳಗೆ ಯಾರೊಬ್ಬರೂ ಮೊಬೈಲ್‌, ಕೆಮರಾಗಳನ್ನು ಕೊಂಡೊಯ್ಯುವುದು ಮತ್ತು ಬಳಕೆ ಮಾಡುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಲಭ್ಯವಾಗುವುವಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸ
ಬೇಕು. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಸುಗಮ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ, ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು, ಪರೀಕ್ಷಾ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿಡಲು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

Advertisement

ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಡಿಡಿಪಿಐ ಗೋವಿಂದ ಮಡಿವಾಳ, ಡಯಟ್‌ ಪ್ರಾಂಶುಪಾಲ ಅಶೋಕ್‌ ಕಾಮತ್‌, ಜಿಲ್ಲಾ ಖಜಾನಾಧಿಕಾರಿ ಗೋಪಾಲಕೃಷ್ಣ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next