ರಾಯಚೂರು: ಕಳೆದ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ನ್ಯಾ| ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಬುಧವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಒಳಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ನ್ಯಾ| ಸದಾಶಿವ ಆಯೋಗ ವರದಿ ಸಲ್ಲಿಕೆಯಾಗಿ ಒಂದು ದಶಕವೇ ಕಳೆದಿದೆ. ಆದರೆ, ಯಾವೊಂದು ಸರ್ಕಾರ ಕೂಡ ನಮ್ಮ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ. ಒಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಎರಡು ದಶಕದಿಂದ ನಿರಂತರ ಹೋರಾಟ ನಡೆಸುತ್ತಲೇ ಇದ್ದೇವೆ. ನಾನಾ ರೀತಿಯ ಹೋರಾಟಗಳು ನಡೆಸಿದ್ದರೂ ಸರ್ಕಾರಗಳು ಕಡೆಗಣಿಸುತ್ತಲೇ ಬರುತ್ತಿವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗದೇ ಇರುವುದರಿಂದ ಸೌಲಭ್ಯ ವಂಚಿತರಾಗಿದ್ದಾರೆ ಎಂದು ದೂರಿದರು.
ಚಳಿಗಾಲದ ಅಧಿವೇಶನದಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲದೇ ಹೋದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು. ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಜಿಲ್ಲಾಧ್ಯಕ್ಷ ಮಾನಪ್ಪ ಮೇಸ್ತ್ರಿ, ಸುರೇಶ ದುಗನೂರು , ದುಳ್ಳಯ್ಯ ಗುಂಜಳ್ಳಿ, ಗೋವಿಂದ ಈಟೇಕರ್, ರಂಜೀತ್ ದಂಡೋರ, ಶಿವಕುಮಾರ, ಜಕ್ರಪ್ಪ ಹಂಚಿನಾಳ, ರವಿ ದೇವನಪಲ್ಲಿ, ಸುರೇಶಬಾಬು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.