ಹಾಸನ: ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಹಾಸನ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಗ್ರಹಿಸಿದಲಿತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾವೀರ ವೃತ್ತ, ಕಸ್ತೂರಬಾ ರಸ್ತೆ ಮೂಲಕ ಸಾಗಿ ಎನ್.ಆರ್. ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ಹಾಸನ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಕೆಲಕಾಲ ಧರಣಿ ನಡೆಸಿ ಆನಂತರ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಸನ ಜಿಲ್ಲೆಯಲ್ಲಿ 7 ಮಂದಿ ದಲಿತ ಯುವಕರ ಕೊಲೆಯಾಗಿದ್ದಾರೆ. ದಲಿತ ಯುವತಿಯರು, ಮಹಿಳೆಯರ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಮುಂತಾದ 106 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು. ದಲಿತರ ಕೊಲೆ ಮತ್ತು ದೌರ್ಜನ್ಯ ಪ್ರಕರಣ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸುತ್ತೋಲೆಗಳನ್ನು ಮತ್ತು ನಿರ್ದೇಶನಗಳನ್ನು ನೀಡುತ್ತಿವೆ ಹಾಗಿದ್ದರೂ ಇಷ್ಟೊಂದು ಪ್ರಕರಣಗಳು ಪ್ರಕರಣಗಳು ಜಿಲ್ಲೆಯಲ್ಲಿ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು.
ಜಿಲ್ಲೆಯಲ್ಲಿ ನಡೆದಿರುವ ಕೊಲೆಗಳು ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕೊಲೆಯಾಗಿರುವ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸವನ್ನು ಕೊಡಬೇಕು ಹಾಗೂ ಸರ್ಕಾರದಿಂದ ಸಿಗುವ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ದಲಿತ ಸಂಘಟನೆಗಳ ರಾಜ್ಯ ಸಂಚಾಲಕ ಎಂ.ಸೋಮಶೇಖರ್, ದಲಿತ ಸಂಘಟನೆಗಳ ಮುಖಂಡರಾದ ಎಚ್.ಕೆ. ಸಂದೇಶ್, ಕೆ.ಈರಪ್ಪ, ಕುಮಾರಸ್ವಾಮಿ, ಛಲವಾದಿ ಸಂಘಟನೆ ಜಿಲ್ಲಾಧ್ಯಕ್ಷ ಪುಟ್ಟರಾಜು, ಮಾದಿಗ ದಂಡೋರ ಮುಖಂಡ ವಿಜಯಕುಮಾರ್ ಇದ್ದರು.