ಹಾಸನ: ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರಿ ಈಡೇರಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುವ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. ವಿವಿಧ ಕಾಲೇಜುಗಳಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಕೆಲ ಕಾಲ ಧರಣಿ ನಡೆಸಿ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ತರಗತಿ ನಡೆಯುತ್ತಿಲ್ಲ: ಅತಿಥಿ ಉಪನ್ಯಾಸಕರು ಡಿ.10 ರಿಂದಲೂ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿ ರುವುದರಿಂದ ಕಾಲೇಜುಗಳಲ್ಲಿ ತರಗತಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ. ಕಾಲೇಜುಗಳಲ್ಲಿ ಶೇ.30 ಮಾತ್ರ ಕಾಯಂ ಉಪನ್ಯಾಸಕರಿದ್ದು, ಶೇ.70ರಷ್ಟು ಅತಿಥಿ ಉಪನ್ಯಾಸಕರಿದ್ದಾರೆ. ಹಾಗಾಗಿ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬಹುತೇಕ ಸರ್ಕಾರಿ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಮುಖಂಡರಾದ ಧಾಮಿನಿ, ಬೊಮ್ಮಣ್ಣ, ಚೈತ್ರಾ ಮತ್ತಿತರರು ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿ ಆರ್.ಗಿರೀಶ್‌ರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.