ಮುಂಬಯಿ: ಇಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿಅನಾಹುತಕ್ಕೆ ಹಿರಿಯ ವ್ಯಕ್ತಿಯೊಬ್ಬರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ನಗರದಲ್ಲಿ ಬುಧವಾರ(ಏಪ್ರಿಲ್ 28) ಬೆಳಗ್ಗೆ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅಸ್ಸಾಂನಲ್ಲಿ 6.4 ತೀವ್ರತೆಯ ಭಾರೀ ಭೂಕಂಪ, ಜನರಲ್ಲಿ ಆತಂಕ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಾಸ್ಮೀನ್ ಝಡ್ (46), ನವಾಬ್ ಎಂ,ಶೇಖ್ (47), ಹಲೀಮಾ ಬಿ.ಸಲ್ಮಾನಿ(70) ಸೇರಿದಂತೆ ನಾಲ್ವರು ಸಾವಿಗೀಡಾಗಿರುವುದಾಗಿ ಥಾಣೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ವಿವಿಧ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.
ಮಹಾರಾಷ್ಟ್ರದ ವಸತಿ ಸಚಿವ ಡಾ.ಜಿತೇಂದ್ರ ಅವ್ಹಾದ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಈ ಬಗ್ಗೆ ಪೊಲೀಸರು ಮತ್ತು ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ಶೀಘ್ರವೇ ವಿವರ ನೀಡಲಿದ್ದಾರೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿರುವ ಕುಟುಂಬ ಸದಸ್ಯರಿಗೆ ತಲಾ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.