Advertisement

ತಾರಕಕ್ಕೇರಿದ ರಾಜಕೀಯ ಸಂಘರ್ಷ

07:25 AM Jul 11, 2019 | Lakshmi GovindaRaj |

ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಶಾಸಕರು ಬುಧವಾರ ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಯಾಗಿ, “ಆಪರೇಷನ್‌ ಕಮಲ’ ಹಾಗೂ ರಾಜಭವನವನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ರಾಜಭವನ ಚಲೋ ನಡೆಸುವ ಮೂಲಕ ರಾಜ್ಯ ರಾಜಕಾರಣದ ಸಂಘರ್ಷ ತಾರ್ಕಿಕ ಘಟ್ಟಕ್ಕೆ ತಲುಪಿದೆ.

Advertisement

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ
ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಸಂಖ್ಯಾಬಲ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕರು ಬುಧವಾರ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ನಂತರ, ಯಡಿಯೂರಪ್ಪ ನೇತೃತ್ವದ ಶಾಸಕರ ನಿಯೋಗ ಮಧ್ಯಾಹ್ನ ರಾಜಭವನಕ್ಕೆ ತೆರಳಿ ವಿ.ಆರ್‌.ವಾಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಈಗಾಗಲೇ ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ತ್ವರಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಹಾಗೂ ರಾಜೀನಾಮೆ ನೀಡುವ ಶಾಸಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ನಿಯೋಗ ಮನವಿ ಮಾಡಿತು.

ಆದರೆ, ಮೈತ್ರಿ ಸರ್ಕಾರ ಸಂಖ್ಯಾಬಲ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿಗಳಿಗೆ ವಿಶ್ವಾಸಮತ ಯಾಚನೆಗೆ ಒತ್ತಡ ಹೇರದಿರಲು ಬಿಜೆಪಿ ತೀರ್ಮಾನಿಸಿದೆ. ಬಳಿಕ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಅವರನ್ನು ಯಡಿಯೂರಪ್ಪ ನೇತೃತ್ವದಲ್ಲಿ ಕೆಲ ಬಿಜೆಪಿ ನಾಯಕರು ಭೇಟಿಯಾಗಿ ಚರ್ಚಿಸಿದರು. ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ತ್ವರಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಬಿಜೆಪಿಯಿಂದ ಒತ್ತಡ ತಂತ್ರ: ಒಟ್ಟಾರೆ ಮೈತ್ರಿ ಸರ್ಕಾರ ಸಂಖ್ಯಾಬಲ ಕಳೆದುಕೊಂಡು ಅಲ್ಪಮತಕ್ಕೆ ಕುಸಿದಿದ್ದು, ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬೆಳಗ್ಗೆ ಪ್ರತಿಭಟನೆ ನಡೆಸಿದ ಬಿಜೆಪಿ, ಮಧ್ಯಾಹ್ನ ರಾಜ್ಯಪಾಲರು, ಸ್ಪೀಕರ್‌ ಅವರನ್ನು ಭೇಟಿಯಾಗಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವ ಮೂಲಕ ಒತ್ತಡ ಹೇರುವ ಕಾರ್ಯ ನಡೆಸಿತು.

Advertisement

ರಾಜ್ಯದ ಇತರೆಡೆಯೂ ಪ್ರತಿಭಟನೆ: ಇದೇ ವೇಳೆ, ಮೈತ್ರಿ ಸರ್ಕಾರಕ್ಕೆ ಸಂಖ್ಯಾಬಲ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಇತರೆಡೆಯೂ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ, ಮಂಗಳೂರು, ರಾಮನಗರ, ಮಂಡ್ಯ, ಕಲಬುರಗಿ ಸೇರಿದಂತೆ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.

ನಿಂಬೆಹಣ್ಣು ಹಿಡಿದು ರೇವಣ್ಣ ವಿರುದ್ಧ ಪ್ರತಿಭಟನೆ: ಸಚಿವ ಎಚ್‌.ಡಿ.ರೇವಣ್ಣ ಅವರು ಅಧಿಕಾರ ಇಲ್ಲದಿದ್ದರೂ ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ನಿಂಬೆಹಣ್ಣನ್ನು ಹಿಡಿದು ಮಂಡ್ಯದಲ್ಲಿ ಪ್ರತಿಭಟಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಹೊತ್ತಿಕೊಂಡು ಉರಿಯುತ್ತಿರುವಾಗ ಪ್ರಜೆಗಳ ಕುಂದು ಕೊರತೆ ಆಲಿಸದೆ ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡುವ ಮೂಲಕ ಹಗಲು ದರೋಡೆಗೆ ಸಚಿವರು ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next