ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐಗೆ ಒಪ್ಪಿಸಬೇಕು. ಇದಕ್ಕೆ ಕಾರಣರಾದ ಸಚಿವ ಕೆ.ಎಸ್. ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಖಂಡಿಸಿ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಗರದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಆಡಳಿತಾವಧಿಯ ಸರ್ಕಾರವನ್ನು ಯಾವುದೇ ಆಧಾರವಿಲ್ಲದೇ ಶೇ.10 ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದರು.
ಆದರೆ ಈಗ ಬಿಜೆಪಿ ಸರ್ಕಾರ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಗುತ್ತಿಗೆದಾರರು ಶೇ.40 ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದರೂ ಪ್ರಧಾನಿ ಮೋದಿ ತುಟಿ ಬಿಚ್ಚುತ್ತಿಲ್ಲ ಎಂದರು.
ಗುತ್ತಿಗೆದಾರ ಸಂತೋಷ ಪಾಟೀಲ್ ಪತ್ರಕ್ಕೆ ಪ್ರಧಾನಿ, ರಾಜ್ಯ ಸರ್ಕಾರ ಸ್ಪಂದಿಸಿದ್ದರೆ ಸಂತೋಷ ಅವರ ಜೀವ ಉಳಿಸಬಹುದಿತ್ತು. ಆದರೆ ಬಿಜೆಪಿ ಸರ್ಕಾರ ಹಾಗೂ ಸಚಿವರ ಭ್ರಷ್ಟ ಆಡಳಿತಕ್ಕೆ ಸಂತೋಷ ಜೀವ ಬಲಿಯಾಗಿದ್ದು, ಅವರ ಕುಟುಂಬ ಅನಾಥವಾಗಿದೆ. ಗುತ್ತಿಗೆದಾರ ಸಂತೋಷ ಪಾಟೀಲ ತನಗೆ ಆದ ಅನ್ಯಾಯದ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ ಸರ್ಕಾರ ಅವರಿಗೆ ಸ್ಪಂದಿಸಿಲ್ಲ. ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳುವ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರಕರಣದಲ್ಲಿ ಸರಿಯಾದ ತನಿಖೆ ನಡೆಯಬೇಕು. ಸಂತೋಷಗೆ ಯಾರಾದರೂ ಹೇಳಿ ಕೆಲಸ ಮಾಡಿಸಿರಬಹುದು. ಇದರ ಬಗ್ಗೆ ಸಮಗ್ರ ತನಿಖೆ ನಡೆಸಲಿ. ಶಾಸಕರ ಗಮನಕ್ಕೆ ತರದೆ ಕಾಮಗಾರಿ ನಡೆಸಲಾಗಿದೆ. ಇದು ನಮ್ಮ ಕ್ಷೇತ್ರದಲ್ಲೂ ಆಗಿದೆ. ಇದೇ ರೀತಿ ಅನೇಕ ಕಡೆಗಳಲ್ಲಿ ನಡೆದಿದೆ ಎಂದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್. ಈಶ್ವರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕೂಡಲೇ ಕಠಿಣ ಕ್ರಮ ಜರುಗಿಸಬೇಕು. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಶಾಸಕಿ ಲಕ್ಷ್ಮೀ ಹೆಬ್ಟಾಳಕರ್, ಮಾಜಿ ಶಾಸಕ ಅಶೋಕ ಪಟ್ಟಣ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ನಗರ ಅಧ್ಯಕ್ಷ ರಾಜು ಸೇಠ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ., ಮಾಜಿ ಶಾಸಕ ಶ್ಯಾಮ ಘಾಟಗೆ, ಸುನೀಲ್ ಹನಮಣ್ಣವರ್ ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ, ಸುನೀಲ್ ಸಂಕ, ಸದಾಶಿವ ಬೂಟಾಳಿ, ಸಿದ್ದಾರ್ಥ ಸಿಂಗೆ ಪಾಲ್ಗೊಂಡಿದ್ದರು.