ಉಡುಪಿ/ಮಂಗಳೂರು: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಮೌಲ್ಯಾಂಕನ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯ ಅಯಾ ಶಾಲಾ ಕೇಂದ್ರಿತವಾಗಿ ಪರೀಕ್ಷೆ ನಡೆದಿದೆ.
ವಿದ್ಯಾರ್ಥಿಗಳ ಕಲಿಕಾ ಸಾಮರ್ಥ ಅರಿಯಲು ಈ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯ ಆಧಾರದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಅಥವಾ ಅನುತ್ತೀರ್ಣಗೊಳಿಸುವುದು ಇರುವುದಿಲ್ಲ. ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುತ್ತದೆ. ಪರೀಕ್ಷೆಯ ಮೌಲ್ಯಾಂಕನದ ಆಧಾರದಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಒತ್ತು ನೀಡಲಾಗುತ್ತದೆ. ಮೊದಲ ದಿನ ಎರಡೂ ತರಗತಿಗಳ ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್, ಹಿಂದಿ, ಅರೇಬಿಕ್, ಸಂಸ್ಕೃತ ಇತ್ಯಾದಿ) ಪರೀಕ್ಷೆಯಲ್ಲಿ ಶೇ.75ಕ್ಕೂ ಅಧಿಕ ಹಾಜರಾತಿ ದಾಖಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಮೌಲ್ಯಾಂಕನ ಪರೀಕ್ಷೆಯ ಅನಂತರ ನಿರ್ದಿಷ್ಟ ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರಪತ್ರಿಕೆ ಮೌಲ್ಯಮಾಪನ ನಡೆಸಿ, ಅಂಕಗಳನ್ನು ಗ್ರೇಡ್‌ಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮೌಲ್ಯಾಂಕನ ಪರೀಕ್ಷೆಗೆ ಎಲ್ಲ ಸಿದ್ಧತೆ ನಡೆಸಲಾಗಿತ್ತು. ಶಾಲೆಗಳ ಮುಖ್ಯೋಪಾಧ್ಯಾಯರು ಸಿಆರ್‌ಸಿ ಕೇಂದ್ರಕ್ಕೆ ಆಗಮಿಸಿ ಪ್ರಶ್ನೆಪತ್ರಿಕೆ ಪಡೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ತೆರಳಿದರು. ಬಳಿಕ ಉತ್ತರ ಪತ್ರಿಕೆಯನ್ನು ಪರೀಕ್ಷಾ ಕೇಂದ್ರದಿಂದ ಸಿಆರ್‌ಸಿ ಕೇಂದ್ರಕ್ಕೆ ಹಸ್ತಾಂತರಿಸಿದರು.