ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ಮೇ 3ರಂದು ಮೂಲ್ಕಿ ಸಮೀಪದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಪ್ರಚಾರ ನಡೆಸಲಿದ್ದಾರೆ. ಈ ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರು ಸೇರುವ ನಿರೀಕ್ಷೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರ ಕಾರ್ಯಕ್ರಮದ ರಾಜ್ಯ ಸಂಚಾಲಕ ಹಾಗೂ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ್ ಕುಮಾರ್ ಶೆಟ್ಟಿ ತಿಳಿಸಿದರು.
ಕಡಿಯಾಳಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರವನ್ನು ಒಳಗೊಂಡು ಈ ಸಮಾವೇಶ ಆಯೋಜಿಸಲಾಗಿದೆ.
ಕಾಪು, ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ತಲಾ 30 ಸಾವಿರ, ಮಂಗಳೂರು ಸುತ್ತಲಿನ ವಿಧಾನಸಭಾ ಕ್ಷೇತ್ರದಿಂದ 25,000 ಹಾಗೂ ಉಳಿದ ವಿಧಾನಸಭಾ ಕ್ಷೇತ್ರಗಳಿಂದ ತಲಾ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರು ಸಮಾವೇಶಕ್ಕೆ ಆಗಮಿಸಲಿದ್ದಾರೆ. 2018ರ ಚುನಾವಣೆ ಪ್ರಚಾರಕ್ಕೂ ಮೋದಿಯವರು ಬಂದಿದ್ದರು ಹಾಗೂ ಬಿಜೆಪಿ ಅಭ್ಯರ್ಥಿಗಳು 13ರಲ್ಲಿ 12 ಕ್ಷೇತ್ರ ಗೆಲ್ಲಲು ಸಾಧ್ಯವಾಗಿತ್ತು. ಈ ಬಾರಿ 13ಕ್ಕೆ 13 ಕ್ಷೇತ್ರವನ್ನು ಗೆಲ್ಲಲಿದ್ದೇವೆ ಎಂದರು.
ಹಿಂದುತ್ವ ಮತ್ತು ಅಭಿವೃದ್ಧಿ ಬಿಜೆಪಿಯ ಎರಡು ಕಣ್ಣುಗಳು…
ಹಿಂದುತ್ವ ಮತ್ತು ಅಭಿವೃದ್ಧಿ ಬಿಜೆಪಿಯ ಎರಡು ಕಣ್ಣುಗಳು. ಈ ಎರಡು ಅಜೆಂಡಾವನ್ನು ಪ್ರಮುಖವಾಗಿಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ. ಉಡುಪಿಯಲ್ಲಿ 4 ಹಾಗೂ ದ.ಕ.ದಲ್ಲಿ 2 ಒಟ್ಟು ಆರು ಮಂದಿ ಹೊಸಬರಿಗೆ ಟಿಕೆಟ್ ನೀಡಿದ್ದೇವೆ. ಎಲ್ಲಿಯೂ ಅಸಮಾಧಾನವಿಲ್ಲ. ಭರದಿಂದ ಪ್ರಚಾರ ಸಾಗುತ್ತಿದೆ. ಶಾಸಕ ಸುಕುಮಾರ್ ಶೆಟ್ಟಿಯವರೊಂದಿಗೆ ಮಾತುಕತೆ ನಡೆಸಿದ್ದೇವೆ. ಬಿಜೆಪಿ ಪರ ಪ್ರಚಾರಕ್ಕೂ ಬರಲಿದ್ದಾರೆ ಎಂದು ಹೇಳಿದರು.
ಮೇ 6ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ. ಪುತ್ತೂರು, ಬಂಟ್ವಾಳ, ಕಾರ್ಕಳ, ಮುರುಡೇಶ್ವರದಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಬೈಂದೂರಿನಲ್ಲೂ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದರು.
ಜಿಲ್ಲಾ ವಕ್ತಾರ ಕೆ. ರಾಘವೇಂದ್ರ ಕಿಣಿ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.