ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 5ರಂದು ಸಂಜೆ 5.30ಕ್ಕೆ ನಗರದ ಕೇಂದ್ರ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಂಗಳವಾರ ಮಾಹಿತಿ ನೀಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು.
ಅಂದು ಬೆಳಗ್ಗೆ ಶಿವಮೊಗ್ಗದಲ್ಲಿ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಪ್ರಧಾನಿ ಆಗಮಿಸಲಿದ್ದಾರೆ. ರಾಷ್ಟ್ರ ಹಾಗೂ ರಾಜ್ಯದ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಸಂಜೆ 4.30ರ ಒಳಗೆ ಮೈದಾನದ ಪೆಂಡಾಲ್ ಒಳಗಡೆ ಬಂದು ಆಸೀನರಾಗಬೇಕು ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಅವರ ಪುತ್ರ, ಬೆಳ್ತಂಗಡಿ ಬಿಜೆಪಿ ಮುಖಂಡ ರಂಜನ್ ಗೌಡ ಅವರ ನಿಲುವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ರಂಜನ್ ಗೌಡ ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ ಎಂದರು.
ವಿಧಾನ ಪರಿಷತ್ ವಿರೋಧ ಪಕ್ಷದ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್, ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ. ಭಟ್, ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ಸುದರ್ಶನ್ ಮೂಡಬಿದಿರೆ ಉಪಸ್ಥಿತರಿದ್ದರು.