ಬೆಂಗಳೂರು: ಬಿಬಿಎಂಪಿಯ ಮೇಯರ್ ಹಾಗೂ ಉಪಮೇಯರ್ ಚುನಾವಣಾ ದಿನಾಂಕವನ್ನು ಸೆ.27ರಿಂದ ಅ.1ಕ್ಕೆ ಮುಂದೂಡಿ ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತಾ ಅವರು ಆದೇಶ ಹೊರಡಿಸಿದ್ದಾರೆ. ಹಾಲಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಉಪಮೇಯರ್ ಭದ್ರೇಗೌಡ ಅವರ ಅಧಿಕಾರ ಅವಧಿ ಸೆ.28ರಂದು ಮುಗಿಯುವ ಹಿನ್ನೆಲೆಯಲ್ಲಿ ಸೆ.27ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಿ, ಪೂರ್ವಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿತ್ತು.
ಆದರೆ, ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಅವರು, ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಜತೆಗೇ ಸ್ಥಾಯಿ ಸಮಿತಿಗಳ ಚುನಾವಣೆಯನ್ನೂ ನಡೆಸುವಂತೆ ಪ್ರಾದೇಶಿಕ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಈ ನಡುವೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್, ಸ್ಥಾಯಿ ಸಮಿತಿ ಸದಸ್ಯರ ಅಧಿಕಾರ ಅವಧಿ ಡಿಸೆಂಬರ್‌ವರೆಗೆ ಇರುವುದರಿಂದ ಡಿಸೆಂಬರ್‌ನಲ್ಲೇ ಸ್ಥಾಯಿ ಸಮಿತಿ ಚುನಾವಣೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಗೆ ಹಾಗೂ ಪ್ರಾದೇಶಿಕ ಚುನಾವಣಾ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದರು.
ಎರಡು ಪಕ್ಷಗಳ ಭಿನ್ನ ಬೇಡಿಕೆಗಳಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಈ ಗೊಂದಲ ನಿವಾರಣೆಗೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕಾನೂನು ಕೋಶದಿಂದ ಸಲಹೆ ಕೇಳಿದ್ದರು. ಕಾನೂನು ಕೋಶದಿಂದ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯುವ ದಿನವೇ 12 ಸ್ಥಾಯಿ ಸಮಿತಿಗೆ ಚುನಾವಣೆ ನಡೆಸುವಂತೆ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಅ.1ರಂದು 11.30ಕ್ಕೆ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.
ನೀತಿ ಸಂಹಿತೆ ಮಿತಿಗೊಳಿಸುವಂತೆ ಮನವಿ: ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ, ಇಡೀ ನಗರಕ್ಕೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ, ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆ ಉಂಟಾಗುತ್ತಿದೆ. ಹೀಗಾಗಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದ ಭಾಗಕ್ಕೆ ನೀತಿ ಸಹಿಂತೆಯಿಂದ ವಿನಾಯಿತಿ ನೀಡುವಂತೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್, ರಾಜ್ಯ ಮುಖ್ಯಚುನಾವಣಾಧಿಕಾರಿಗೆ ಮತ್ತು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.