ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಭಾರೀ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುರುವಾರ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ 25 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದಾಗಿ ಹೇಳಿ ದಾಖಲೆ ಬಿಡುಗಡೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ನಾವು ಬಿಡುಗಡೆ ಮಾಡಿರುವ ದಾಖಲೆ ನೋಡಿ 24ಗಂಟೆಯೊಳಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದರು.
ಸಚಿವ ಎಂಬಿ ಪಾಟೀಲ್ ರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಎಸ್ ವೈ ಒತ್ತಾಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಹಲವಾರು ಅಕ್ರಮ ನಡೆದಿದೆ ಎಂದರು. ಸಚಿವ ಎಂಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದರು.
ಕಾದು ನೋಡಿ!
ಇನ್ನೆರಡು ದಿನಗಳಲ್ಲಿ ಮತ್ತೊಂದು ದೊಡ್ಡ ಹಗರಣ ಬಯಲಿಗೆ. ನಾಳೆ, ನಾಡಿದ್ದು ಕಾದು ನೋಡಿ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.