ಹುಬ್ಬಳ್ಳಿ: ಎರಡು ದಿನ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಅರ್ಥಪೂರ್ಣ ಚರ್ಚೆ ನಡೆದಿದ್ದು, ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಪಕ್ಷ ಸಂಘಟನೆ ಒತ್ತು ಜತೆಗೆ, ಹಿಂದಿನ ಕಾಂಗ್ರೆಸ್ ಸರಕಾರದ ದುರಾಡಳಿತ ಕುರಿತು ಜನರಿಗೆ ತಿಳಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ನಡೆದ ಭ್ರಷ್ಟಾಚಾರ, ಅಧಿಕಾರಿಗಳ ಆತ್ಮಹತ್ಯೆ, ಹಿಂದೂಗಳ ಹತ್ಯೆ, ದುರಾಡಳಿತವನ್ನು ಜನರ ಮನೆ ಮನೆಗೆ ಹೋಗಿ ಮನವರಿಕೆಗೆ ನಿರ್ಧರಿಸಲಾಗಿದೆ. ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ, ಕೇಂದ್ರ-ರಾಜ್ಯ ಸರಕಾರಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಿ ಶ್ಲಾಘಿಸಲಾಗಿದೆ ಎಂದರು.
ನರೇಂದ್ರ ಮೋದಿಯವರ ವರ್ಚಸ್ಸು, ಕೇಂದ್ರದ ಅಭಿವೃದ್ಧಿ ಕಾರ್ಯಗಳೊಂದಿಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ. 150 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವುದು ಖಚಿತ ಎಂದರು.
ಇದನ್ನೂ ಓದಿ:ದಲಿತರ ರಕ್ಷಣೆಗೆ ಸರಕಾರ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಪೇಜ್ ಕಮಿಟಿಗಳ ರಚನೆಗೆ ಒತ್ತು ನೀಡುವಂತೆ ಸೂಚಿಸಲಾಗಿದ್ದು, ಅದನ್ನು ಕೈಗೊಳ್ಳಲಾಗುತ್ತದೆ ಎಂದರು.