ಹಾವೇರಿ: ಕೋವಿಡ್ ಲಾಕ್‌ಡೌನ್ ಸಡಿಲಿಕೆ ಬಳಿಕಸಾರಿಗೆ ವೆಚ್ಚ ಕಡಿಮೆ ಮಾಡಿ, ಸೋರಿಕೆ ತಡೆದು ಸಂಸ್ಥೆಯನ್ನು ಲಾಭಕ್ಕೆ ತರುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಯೋಜನಾ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಕ್ರಿಯಾ ಯೋಜನೆಗಳನ್ನು ಸಿದ್ಧ ಮಾಡಿಕೊಳ್ಳಬೇಕು. ಉತ್ತಮ ಸೇವೆ ಜೊತೆಗೆ ಸಾರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳುಹಾಗೂ ಸಿಬ್ಬಂದಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ನಿರ್ವಹಣಾ ವೆಚ್ಚ, ಸವಕಳಿ ವೆಚ್ಚವನ್ನು ಕಡಿಮೆ ಮಾಡಬೇಕು, ಆದಾಯ ಸೋರಿಕೆ ತಡೆಯಬೇಕು. ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸ್ವಚ್ಛತೆ, ಸಮಯಕ್ಕೆ ಸರಿಯಾಗಿ ವಾಹನ ಓಡಿಸುವ ಕೆಲಸ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಯಾವ ಯಾವ ಮಾರ್ಗದಲ್ಲಿ ಸಾರಿಗೆ ಬಸ್‌ಗಳು ಓಡಾಡುತ್ತಿವೆ. ಇದರಲ್ಲಿ ಯಾವ ಮಾರ್ಗಗಳು ಲಾಭದಾಯಕ, ಯಾವ ಮಾರ್ಗಗಳಲ್ಲಿ ನಷ್ಟ ಉಂಟಾಗುತ್ತಿದೆ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್‌ಗಳು ಓಡಾಡುತ್ತವೆ ಎಂಬುದನ್ನು ವಿಭಾಗವಾರು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಮಾರ್ಗಗಳಲ್ಲಿ ಲಾಭ ತರುವ ನಿಟ್ಟಿನಲ್ಲಿ ಯೋಜನೆ ತಯಾರಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಯೋಜನೆ ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮವಹಿಸಬೇಕು ಎಂದರು.
ಹೊಸ ಬಸ್ ಬೇಡಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಜಿಲ್ಲೆಯ ರಸ್ತೆ ಸಾರಿಗೆ ಸಂಸ್ಥೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನಿಷ್ಠ 100 ರಿಂದ 150 ಹೊಸ ಬಸ್‌ಗಳನ್ನು ಏಕ ಕಾಲದಲ್ಲಿ ನೀಡಬೇಕು. ಜಿಲ್ಲೆಯಲ್ಲಿ ಅವಶ್ಯವಿರುವ ಬಸ್ ನಿಲ್ದಾಣ, ಸಾರಿಗೆ ಡಿಪೋಗಳ ಉನ್ನತೀಕರಣ ಕಾಮಗಾರಿ, ನವೀಕರಣಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ತಮ್ಮ ಕ್ಷೇತ್ರದ ಸಾರಿಗೆ ಸಮಸ್ಯೆ ಹಾಗೂ ಬೇಡಿಕೆ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಯಾ ಕ್ಷೇತ್ರದ ಶಾಸಕರ ಬೇಡಿಕೆ ಹಾಗೂ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬೇಕು. ಹೊಸ ಕಟ್ಟಡ ಮತ್ತು ನವೀಕರಣಕ್ಕೆ ಕ್ರಿಯಾ ಯೋಜನೆ ರೂಪಿಸಿ ಕಳುಹಿಸಿದರೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದರು.
ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ, ಜಿಪಂ ಸದಸ್ಯರಾದ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ.ದೇವರಾಜು, ಜಿಪಂ ಸಿಇಒ ರಮೇಶದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಜಿಲ್ಲಾ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಕ ಜಗದೀಶ್ ಇತರರು ಇದ್ದರು.