ಬೆಂಗಳೂರು: ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಶಾಶ್ವತ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮಲೆನಾಡು ಭಾಗದ ಜನಪ್ರತಿನಿಧಿಗಳು ಹಾಗೂ ಕಾಫಿ ಬೆಳೆಗಾರರ ಸಭೆ ನಡೆಸಿದ ಅನಂತರ ಮಾತನಾಡಿದ ಅವರು, ರಾಜ್ಯ ಸರಕಾರವು ಕಾಫಿ ಬೆಳೆಗಾರರ ಸಮಸ್ಯೆಗೆ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.
ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಕಾಫಿ ಬೆಳಗಾರರ ಸಂಘದ ಅಧ್ಯಕ್ಷರು, ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದೇನೆ. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದೇನೆ. ರೈತರ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವುದನ್ನು ನಿಲ್ಲಿಸಿದ್ದೇನೆ. ಈಗಾಗಲೇ ಕಾಫಿ ಬೆಳೆಗಾರರೊಂದಿಗೆ ನಾಲ್ಕೈದು ಸಭೆ ನಡೆಸಿ ಅವರ ಅಗತ್ಯ ಏನು ಎನ್ನುವುದನ್ನು ತಿಳಿದಿದ್ದೇನೆ ಎಂದು ಹೇಳಿದರು.
ಕಳೆದ 30-35 ವರ್ಷಗಳಿಂದ ದುಡಿಯುತ್ತಿದ್ದವರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುತ್ತೇನೆ. ಸರಕಾರ ಸದಾ ನಿಮ್ಮ ಜತೆ ಇದೆ. ನಿಮ್ಮ ಎಲ್ಲ ಸಮಸ್ಯೆಗಳಿಗೆ ಸದ್ಯದಲ್ಲೇ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದೇನೆ. ಲೀಸ್ ಕೊಡುವ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಯಾವ ರೀತಿ ನೀಡಬೇಕು ಎನ್ನುವುದನ್ನು ಅಂತಿಮಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಶಾಸಕ ಎಂ.ಪಿ. ಕುಮಾರಸ್ವಾಮಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಮಾಜಿ ಶಾಸಕ ವಿಶ್ವನಾಥ್ ಉಪಸ್ಥಿತರಿದ್ದರು.