ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆದಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಶುಕ್ರವಾರವಷ್ಟೇ ಮುಕ್ತಾಯವಾದ ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಜಾರ್ಖಂಡ್ ವಿಧಾನಸಭೆಯ ಚುನಾವಣೆ ಪ್ರಚಾರದಲ್ಲಿ ವರಿಷ್ಠರು ನಿರತರಾಗಿರುವ ಹಿನ್ನೆಲೆಯಲ್ಲಿ ದೆಹಲಿ ಭೇಟಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದೂಡಿದ್ದರು. ಆದರೆ, ಶುಕ್ರವಾರ ಬಿ.ವೈ.ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.
ಭೇಟಿ ವೇಳೆ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಅಭಿನಂದನೆ ಸಲ್ಲಿಸಿದರು. ಮುಖ್ಯವಾಗಿ ಜೆಡಿಎಸ್ ಹಾಗೂ ಒಕ್ಕಲಿಗರ ಭದ್ರಕೋಟೆ ಎನಿಸಿರುವ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವುದಕ್ಕೆ ಅಮಿತ್ ಶಾ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.
ದೆಹಲಿಯಿಂದ ಹಿಂತಿರುಗಿದ ಬಿ.ವೈ.ವಿಜಯೇಂದ್ರ ಶನಿವಾರ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಅಮಿತ್ ಶಾ ಅವರ ಭೇಟಿ ಸಂದರ್ಭದಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು ಎನ್ನಲಾಗಿದೆ. ಇತ್ತೀಚೆಗೆ ಬಿಜೆಪಿಯಿಂದ ಆಯ್ಕೆಯಾಗಿರುವ 11 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು, ಕೆಲವರಿಗೆ ಆಯ್ದ ಖಾತೆ ಕೊಡಬೇಕು,
ಉಪಚುನಾವಣೆಯಲ್ಲಿ ಪರಾಭವಗೊಂಡಿರುವ ಹಿರಿಯರಿಗೆ ಪರ್ಯಾಯ ಸ್ಥಾನಮಾನ ಕಲ್ಪಿಸಬೇಕು ಎಂದು ನೂತನ ಶಾಸಕರ ಗುಂಪು ಒತ್ತಾಯಿಸುತ್ತಿದೆ. ಇನ್ನೊಂದೆಡೆ, ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಗೆ ಆಗ್ರಹ ಕೇಳಿ ಬಂದಿರುವ ಹೊತ್ತಿನಲ್ಲೇ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.