ಕಲಬುರಗಿ: ಸೆಪ್ಟೆಂಬರ್ 17ರಂದುನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದರಿಂದ ಅಧಿಕಾರಿ ಗಳೆಲ್ಲರೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕದ ಉತ್ಸವದ ಅಂಗವಾಗಿ ಸೋಮವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಚಾಚೂ ತಪ್ಪದೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸುತ್ತಿದ್ದು, ಎಲ್ಲಾ ಕಾಮಗಾರಿಗಳ ಶಿಲಾನ್ಯಾಸದ ನಾಮಫಲಕ, ಸ್ಟ್ಯಾಂಡ್ ಮುಂತಾದವುಗಳನ್ನು ವ್ಯವಸ್ಥೆ ಮಾಡಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹೇಳಿದರು.
ಧ್ವನಿವರ್ಧಕ, ಬೆಳಕು ಮುಂತಾದಎಲ್ಲಾ ವ್ಯವಸ್ಥೆಗಳನ್ನು ಸೆ.16ರೊಳಗೆ ಸಂಜೆ ಪೂರ್ಣಗೊಳಿಸಬೇಕು. ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರಬಾರದು. ಆದರೆ, ಕಾರ್ಯಕ್ರಮವನ್ನು ಫೇಸ್ ಬುಕ್, ಯೂಟ್ಯೂಬ್‌ಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಈ ಕುರಿತು ತಾಂತ್ರಿಕ ನೆರವು ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ ಅವರಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಪಂ ಸಿಇಒ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಂ ಜಾರ್ಜ್, ಡಿಸಿಪಿ ಕಿಶೋರ್ ಬಾಬು, ಪಾಲಿಕೆ ಆಯುಕ್ತಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ ಮುಂತಾದವರು ಇದ್ದರು.
ರಾಷ್ಟ್ರಧ್ವಜಕ್ಕೆ ಅಗೌರವ ತೋರಿದರೆ ಶಿಸ್ತು ಕ್ರಮ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯವಿದ್ದಲ್ಲಿ ನೂತನ ರಾಷ್ಟ್ರಧ್ವಜ ಖರೀದಿಸಬೇಕು. ಯಾವುದೇ ಕಾರಣಕ್ಕೂರಾಷ್ಟ್ರ ಧ್ವಜಕ್ಕೆ ಅಗೌರವವಾದದ್ದು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಾನೂನಿನನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.17ರಂದು ಬೆಳಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿಗಳು ಧ್ವಜಾರೋಹಣ ನೆರವೇರಿಸುವರು. ಜಿಲ್ಲಾ ಮಟ್ಟದ ಅಧಿ ಕಾರಿಗಳು ಅಂದು ಬೆಳಗ್ಗೆ 8.30 ಗಂಟೆಯೊಳಗಾಗಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ನಗರದ ಡಿ.ಎ.ಆರ್ .ಪೊಲೀಸ್ ಪರೇಡ್ ಮೈದಾನದಲ್ಲಿ ಹಾಜರಾಗಬೇಕು. ಇದಕ್ಕೆ ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನಿನನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಡಿಸಿ ತಿಳಿಸಿದ್ದಾರೆ.