Advertisement

ಪರೀಕ್ಷಾ ಭದ್ರತೆ ಬಗ್ಗೆ ಶಿಕ್ಷಣ ಸಚಿವರಿಂದ ಸಭೆ

08:51 PM Feb 21, 2023 | Team Udayavani |

ಬೆಂಗಳೂರು: ಮಾರ್ಚ್‌ 9ರಿಂದ ಏಪ್ರಿಲ್‌ 15ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

Advertisement

ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಗೃಹ ಸಚಿವರು, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಪ್ರತ್ಯೇಕ ಸಭೆಗಳನ್ನು ನಡೆಸಿದ ಸಚಿವರು ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ. ಸಿಸಿ ಕ್ಯಾಮರಾ ಕಣ್ಗಾವಲು ಇರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್‌ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್‌ ಮಾಡಲಾಗುತ್ತದೆ. ಸೈಬರ್‌ ಸೆಂಟರ್‌, ಟ್ಯೂಷನ್‌ ಕೇಂದ್ರಗಳು, ಕಂಪ್ಯೂಟರ್‌ ಗೇಮ್ಸ… ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಹೇಳಿದರು.

ಮುಂಜಾಗ್ರತೆ ಬಂಧನ: ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಸೇರಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳು 24/7 ಪೊಲೀಸ್‌ ಭದ್ರತೆ ಮತ್ತು ಸಿಸಿ ಕ್ಯಾಮರಾ ನಿಗಾದಲ್ಲಿರುತ್ತವೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್‌ ಫೋನ್‌ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ಮಾತ್ರ ಕ್ಯಾಮರಾ ಸೌಲಭ್ಯ ಇಲ್ಲದ ಬೇಸಿಕ್‌ ಮೊಬೈಲ್‌ ಫೋನ್‌ ಬಳಕೆಗೆ ಅನುಮತಿ ಇರುತ್ತದೆ ಎಂದು ಸಚಿವರು ತಿಳಿಸಿದರು.

Advertisement

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಇಲಾಖೆ, ಗೃಹ ಇಲಾಖೆ ಮತ್ತು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಕಾಸಸೌಧದಲ್ಲಿ ಶಿಕ್ಷಣ ಮತ್ತು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಚಿವ ಬಿ.ಸಿ. ನಾಗೇಶ್‌ ವಿಡಿಯೋ ಕಾನ್ಫರೆನ್ಸ್‌ ನಡೆಸಿದರು.

-ದ್ವಿತೀಯ ಪಿಯುಸಿ
– ಒಟ್ಟು ಪರೀಕ್ಷಾ ಕೇಂದ್ರಗಳು: 1,109
– ಒಟ್ಟು ವಿದ್ಯಾರ್ಥಿಗಳು: 7,27,387

ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಮೊಬೈಲ್‌ ಫೋನ್‌, ಸ್ಮಾರ್ಟ್‌ ವಾಚ್‌, ಇಯರ್‌ ಫೋನ್‌ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್‌ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗುತ್ತದೆ. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಎಸ್‌ಎಸ್‌ಎಲ್‌ಸಿ
– ಒಟ್ಟು ಪರೀಕ್ಷಾ ಕೇಂದ್ರಗಳು : 3,307
-ಒಟ್ಟು ವಿದ್ಯಾರ್ಥಿಗಳು- 8,69,490

Advertisement

Udayavani is now on Telegram. Click here to join our channel and stay updated with the latest news.

Next