Advertisement
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕರ ಭವನದಲ್ಲಿ ಸೋಮವಾರ ನಡೆದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿಗಳ ಸಭೆಯಲ್ಲಿ ಬಹುತೇಕ ಮಂದಿ ಜೆಡಿಎಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದ ಬಗ್ಗೆಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈತ್ರಿ ಮುಂದುವರಿದರೆ ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೂ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನ ಸೋತ ಅಭ್ಯರ್ಥಿಗಳ ಬೇಡಿಕೆಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ತಾವು ಹೇಳಿದ ಅಧಿಕಾರಿಗಳನ್ನು ತಮ್ಮ ಕ್ಷೇತ್ರಗಳಿಗೆ ಹಾಕುವಂತೆ ಮುಖ್ಯಮಂತ್ರಿಯವರಿಗೂ ಪಕ್ಷದಿಂದ ಸೂಚನೆ ನೀಡಬೇಕು ಎಂದು ಕೋರಿರುವುದಾಗಿ ತಿಳಿದುಬಂದಿದೆ.
Related Articles
Advertisement
ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ದೂರು:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಹುತೇಕ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಅಸಮಾಧಾನ ಹೊರಹಾಕಿದ್ದಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ. ಈ ಕುರಿತು ಲಿಖೀತ ದೂರು ಸಲ್ಲಿಸುವಂತೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಬೇಗ ಅಭ್ಯರ್ಥಿ ಘೋಷಣೆಗೆ ಒತ್ತಾಯ:
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಜೆಡಿಎಸ್ ಜತೆಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ. ಇದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಲೆಕ್ಕಾಚಾರವಾಗಿದ್ದು, ಹೈಕಮಾಂಡ್ ಆದೇಶ ಪಾಲಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆಯಲ್ಲಿ ಎಲ್ಲರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಭ್ಯರ್ಥಿಗಳು, ಆದಷ್ಟು ಬೇಗ ಕ್ಷೇತ್ರಗಳ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆಂದು ಕೋರಿದ್ದಾರೆ. ಅಲ್ಲದೆ, ಬಿಜೆಪಿ ಅಭ್ಯರ್ಥಿಗಳನ್ನು ಎದುರಿಸಲು ಈಗಿನಿಂದಲೇ ಕ್ಷೇತ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳುವಂತೆ ನಾಯಕರು ಸೋತ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಏಕೆ ಸೋತಿದ್ದೇವೆ ಎಂದು ಸೂಕ್ಷ್ಮವಾಗಿ ಅವಲೋಕನ ಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಏನು ಮಾಡಬೇಕು ಎನ್ನುವುದರ ಬಗ್ಗೆ ಚರ್ಚಿಸಿದ್ದೇವೆ.
– ಕಾಗೋಡು ತಿಮ್ಮಪ್ಪ, ಮಾಜಿ ಸಚಿವ