ಬೆಂಗಳೂರು: ಜ.31ರಂದು ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಮೊದಲ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ನೇಮಕ ಮಾಡಿರುವ 70 ಜನ ಪ್ರಚಾರ ಸಮಿತಿ ಸದಸ್ಯರು ಹಾಗೂ ರಾಜ್ಯಸಭೆ ಹಾಗೂ ಲೋಕಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಆಸ್ಕರ್ ಫರ್ನಾಂಡಿಸ್ ಸೇರಿ ಸಮಿತಿಯ ಎಲ್ಲ ನಾಯಕರು ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಫೆ.10ರಿಂದ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸುವ ಪ್ರಚಾರ ಕಾರ್ಯಕ್ರಮಗಳ ಆಯೋಜನೆ ಮತ್ತು ಜವಾಬ್ದಾರಿಗಳ ವಿಂಗಡಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಅಲ್ಲದೇ ಬಜೆಟ್ ಅಧಿವೇಶನ ಮುಗಿದ ನಂತರ ಚುನಾವಣೆ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮದ ರೂಪರೇಷೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.