ಸಕಲೇಶಪುರ/ಸುಬ್ರಹ್ಮಣ್ಯ: ಶಿರಾಡಿ ಸುರಂಗ ಮಾರ್ಗ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆಗೆ ಮಹತ್ವದ ಸಭೆ ಸೋಮವಾರ ನಡೆಯಲಿದ್ದು, ಬಹುತೇಕವಾಗಿ ಸುರಂಗ ಮಾರ್ಗ ಯೋಜನೆ ಶೀಘ್ರವಾಗಿ ಅನುಷ್ಠಾನಗೊಳ್ಳುವ ಸಾಧ್ಯತೆಯಿದೆ.
ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶಿರಾಡಿಯಲ್ಲಿ ಸುರಂಗ ಮಾರ್ಗವನ್ನು ಮಾಡುವಂತೆ ನಿತಿನ್ ಗಡ್ಕರಿ ಜತೆಗೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಚಿವರು ರಾಜ್ಯ ಸರಕಾರವು ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ನೀಡಿದರೆ ಯೋಜನೆಯನ್ನು ಜಾರಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.
ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯಕ್ಕೆ ಸಂಬಂಧಪಟ್ಟ ಯೋಜನೆಗಳಿಗಾಗಿ ಎರಡು ದಿನಗಳ ಕಾಲ ದಿಲ್ಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ಶಿರಾಡಿ ಸುರಂಗ ಮಾರ್ಗಕ್ಕೆ ಬೇಕಾಗಿರುವ ಅರಣ್ಯ ಸ್ವಾಧೀನಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀಡುವ ಎಲ್ಲ ಸಾಧ್ಯತೆಯಿದೆ.
ಶಿರಾಡಿ ಘಾಟಿಯಲ್ಲಿ ಸುರಂಗ ನಿರ್ಮಾಣವಾದಲ್ಲಿ ಬೆಂಗಳೂರು-ಮಂಗಳೂರು ನಡುವೆ ಹೆಚ್ಚಿನ ಆರ್ಥಿಕ ಚಟುವಟಿಕೆಗಳು ನಡೆಯಲು ಸಹಾಯಕಾರಿಯಾಗುತ್ತದೆ ಎಂದು ಪ್ರಮುಖ ನಾಯಕರು ಹೇಳುತ್ತಿದ್ದಾರೆ.