ಬೆಂಗಳೂರು: ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಶಾಸಕರು ಶುಕ್ರವಾರ ಸದನ ಆರಂಭವಾಗುತ್ತಿದ್ದಂತೆ ಧರಣಿ ಮುಂದುವರೆಸಿದರು.
ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಾತನಾಡಿ, ಮುಂದಿನ ಬುಧವಾರ ಈ ಸಂಬಂಧ ಮುಖ್ಯಮಂತ್ರಿ ಅವರು ಮತ್ತು ವಿಪಕ್ಷ ನಾಯಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು. ಅನಂತರ ಧರಣಿ ಕೈಬಿಟ್ಟರು.
ರಾಜ್ಯದಲ್ಲಿ ಪ್ರಸ್ತುತ ಶೇ. 3ರಷ್ಟಿರುವ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಬೇಕೆಂದು ಪಟ್ಟು ಹಿಡಿದು ಗುರುವಾರ ಸದನದ ಬಾವಿಗಿಳಿದು ಕಾಂಗ್ರೆಸ್‌ನ ಎಸ್ಟಿ ಸಮುದಾಯದ ಶಾಸಕರು ಧರಣಿ ನಡೆಸಿದ್ದರಿಂದ ಸದನ ಮುಂದೂಡಿಕೆಯಾಗಿತ್ತು. ಶುಕ್ರವಾರವೂ ಸದನ ಆರಂಭವಾಗುತ್ತಿದ್ದಂತೆ ಎಲ್ಲ ಸದಸ್ಯರು ಬಾವಿಗಿಳಿದು ಧರಣಿ ಮುಂದುವರೆಸಿದರು. ಬೇಡಿಕೆ ಈಡೇರಿಕೆಗೆ ಸರಕಾರ ನಿರ್ದಿಷ್ಟ ಕಾಲ ಮಿತಿ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಸಹಕಾರ ನೀಡಿ: ಸ್ಪೀಕರ್ :
ನಿಮ್ಮ ಬೇಡಿಕೆ ಬಗ್ಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ನೀವು ಸದನ ನಡೆಸಲು ಸಹಕಾರ ನೀಡಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೋರಿದರು. ಇದರಿಂದ ಸಮಾಧಾನಗೊಂಡ ಕಾಂಗ್ರೆಸ್ ಸದಸ್ಯರು ಧರಣಿ ಕೈಬಿಟ್ಟರು.