ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬೈರಕೂರು ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಾರುತಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂಗಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣಪ್ಪ, ಕ್ರೀಡೆಗಳಿಂದ ಮಾನಸಿಕ ಮತ್ತು ದೈಹಿಕ ನೆಮ್ಮದಿ ಸಿಗುತ್ತದೆ ಎಂದರು.
ನಶಿಸುತ್ತಿರುವ ಕ್ರೀಡೆಗಳನ್ನು ಜೀವಂತವಾಗಿರಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗ್ರಾಮೀಣ ಕ್ರೀಡೋತ್ಸವದಂತಹ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ವಿಷಯ. ಮುಂದೆಯೂ ಇನ್ನಷ್ಟು ಕ್ರೀಡೆಗಳಿಗೆ ಪ್ರೋತ್ಸಾಹ ಸಿಗುವಂತಾಗಲಿ ಎಂದು ಆಶಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತಿ ಸದಸ್ಯ ಪ್ರಕಾಶ್ ರಾಮಚಂದ್ರ, ಗ್ರಾಮಿಣ ಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಕ್ರೀಡೆಗಳನ್ನು ಇಂದಿಗೂ ಜೀವಂತವಾಗಿರಿಸಲು ಇದು ಉತ್ತಮ ವೇದಿಕೆಯಾಗಿದೆ. ಗ್ರಾಮೀಣ ಪ್ರದೇಶದ ಜನತೆ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಸದಸ್ಯ ಕೆ.ಆರ್.ಶ್ರೀನಾಥ್, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕೃಷ್ಣಮ್ಮ, ಸದಸ್ಯರಾದ ಎನ್.ಸಿ.ಶ್ರೀಧರ್, ನಾಗೇಶ್, ಚಲಪತಿ, ನಾಗಮ್ಮ, ಪದ್ಮಮ್ಮ, ರಮಾದೇವಿ, ಗುಲಾಬ್‌ಜಾನ್, ರಿಜಾನ್, ಲಕ್ಷಿದೇವಿ, ಶಮೀಮ್, ಪಿಡಿಒ ಅಶ್ವತ್ಥನಾರಾಯಣ, ಮಾರುತಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಿವಣ್ಣ, ಖಜಾಂಚಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗಜಗ್ಗಾಟ, ಮಡಿಕೆ ಒಡೆಯುವ ಸ್ಪರ್ಧೆ, ಗೋಣಿ ಚೀಲ ಓಟ, ಲೆಮೆನ್ ಮತ್ತು ಸ್ಪೂನ್ ಆಟಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.