ಬೆಂಗಳೂರು: ನ್ಯಾಯಾಲಯದ ಆದೇಶವಿದ್ದರೂ ರಾಜ್ಯದ ವಿವಿಧ ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್-ಸಿ ಸಿಬಂದಿಯನ್ನು ಗ್ರೂಪ್-ಬಿಗೆ ವಿಲೀನಗೊಳಿಸುವ ವಿಚಾರದಲ್ಲಿ ಕರಡು ನಿಯಮಗಳನ್ನು ಪ್ರಕಟಿಸದ ಬಗ್ಗೆ ವಿವರಣೆ ನೀಡಲು ಜೂ.6ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತಂತೆ ಕರ್ನಾಟಕ ನಗರ ಪಾಲಿಕೆಗಳ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಗ್ರೂಪ್-ಸಿ ಹುದ್ದೆಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಆ ಕುರಿತು ಎರಡು ತಿಂಗಳಲ್ಲಿ ಕರಡು ನಿಯಮಗಳನ್ನು ಪ್ರಕಟಿಸುವಂತೆ 2021ರ ಜು.19ರಂದು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಸರಕಾರಕ್ಕೆ ನಿರ್ದೇಶಿಸಿದೆ. ಆದರೆ ಈವರೆಗೂ ಕರಡು ನಿಯಮಗಳನ್ನು ಪ್ರಕಟಿಸಿಲ್ಲ. ಆ ಮೂಲಕ ಕೋರ್ಟ್ ಆದೇಶ ಉಲ್ಲಂ ಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ನ್ಯಾಯಪೀಠ ಅಭಿಪ್ರಾಪಟ್ಟಿತು.
ಅಲ್ಲದೆ, ಪ್ರಕರಣದ ಕುರಿತು ವಿವರಣೆ ನೀಡಲು ಜೂ.6ರಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ಪ್ರಕರಣವೇನು?
ರಾಜ್ಯದ ವಿವಿಧ ಪೌರ ಸಂಸ್ಥೆಯಲ್ಲಿ ಕಂದಾಯ ಅಧಿಕಾರಿಗಳು, ಕಚೇರಿ ವ್ಯವಸ್ಥಾಪಕರು ಮತ್ತು ಹಿರಿಯ ಆರೋಗ್ಯಾಧಿಕಾರಿಗಳ ಗ್ರೂಪ್-ಸಿ ಉದ್ಯೋಗಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸಿ 2020ರ ಸೆ.29ರಂದು ಸರಕಾರ ಆದೇಶಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು, ವೃಂದ ಮತ್ತು ನೇಮಕಾತಿ ಅಧಿನಿಯಮಗಳಿಗೆ ತಿದ್ದುಪಡಿ ತರದೇ ಕೇವಲ ಕಾರ್ಯಕಾರಿ ಆದೇಶದ ಮೂಲಕ ನೇರವಾಗಿ ಗ್ರೂಪ್-ಸಿ ಉದ್ಯೋಗಿಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದರು.
ಅದಕ್ಕೆ ಗ್ರೂಪ್-ಸಿ ಉದ್ಯೋಗಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಹಾಗಾಗಿ ಎರಡು ತಿಂಗಳಲ್ಲಿ ಕರಡು ತಿದ್ದುಪಡಿ ನಿಯಮಗಳ ರೂಪಿಸಿ ನೋಟಿಫಿಕೇಷನ್ ಹೊರಡಿಸಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿ 2021ರ ಜು.19ರಂದು ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು. ಈ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ಅರ್ಜಿದಾರರು ಮತ್ತೆ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸರಕಾರಿ ವಕೀಲರು ಹಾಜರಾಗಿ, ಕರಡು ನಿಯಮಗಳನ್ನು ಸಿದ್ಧಪಡಿಸಲಾಗಿದೆ. ಸಚಿವ ಸಂಪುಟದ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.